ಉಡುಪಿ : ಕೊರೋನಾಗೆ ಸಂಬಂಧಿಸಿದಂತೆ ಮೂರು ಸಾವು ಸಂಭವಿಸಿರುವ ಕುರಿತು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಉಡುಪಿ ನಗರದ ನಿವಾಸಿಯಾಗಿರುವ ಇವರು ಹೈ ಶುಗರ್ ನಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಕೋವಿಡ್ ಲಕ್ಷಣಗಳು ಕಂಡ ಬಂದ ಹಿನ್ನಲೆಯಲ್ಲಿ ಜಿಲ್ಲಾಸ್ಪತ್ರೆ ಗೆ ರೋಗಿಯನ್ನು ದಾಖಲಿಸಲಾಗಿತ್ತು. ಆದರೆ ನಿನ್ನೆ ರಾತ್ರಿ ಆರೋಗ್ಯ ಬಿಗಡಾಯಿಸಿದ ಹಿನ್ನಲೆಯಲ್ಲಿ ನಗರದ ಡಾ.ಟಿ.ಎಂ.ಎ.ಪೈ ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಸ್ಪಂದಿಸದೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಇನ್ನೊಂದು ಪ್ರಕರಣದಲ್ಲಿ ಮರವಂತೆ ಮೂಲದ 58 ವರ್ಷ ಪ್ರಾಯದ ವ್ಯಕ್ತ ಕೊರೋನಾ ಸೋಂಕಿನ ಹಿನ್ನಲೆಯಲ್ಲಿ ಮೃತಪಟ್ಟಿದ್ದಾರೆ. ತೀವ್ರ ಅಸ್ತಮಾದಿಂದ ಬಳಲುತ್ತಿದ್ದ ಈ ವ್ಯಕ್ತಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಸೋಂಕು ಪತ್ತೆಯಾಗಿತ್ತು. ಸೂಕ್ತ ಚಿಕಿತ್ಸೆ ಪ್ರಾರಂಭಿಸುವ ಮೊದಲೇ ಈ ವ್ಯಕ್ತ ಮೃತಪಟ್ಟಿದ್ದರು. ಮೂರನೇ ಪ್ರಕರಣದಲ್ಲಿ ಅಂಕೋಲ ಮೂಲದ ವ್ಯಕ್ತಿಯೋರ್ವರು ಕೊರೋನಾ ಸೋಂಕಿನ ಹಿನ್ನಲೆಯಲ್ಲಿ ಮೃತಪಟ್ಟಿದ್ದಾರೆ. ಸೋಂಕು ಪತ್ತೆಯಾದ ಕೂಡಲೆ ಇವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉಡುಪಿ ಬೀಡಿನಗುಡ್ಡೆಯ ಸ್ಮಶಾನದಲ್ಲಿ ಅಂಕೋಲದ ಮೃತ ವ್ಯಕ್ತಿಯ ಅಂತಿಮ ಸಂಸ್ಕಾರ ನಡೆದಿದೆ. ಸದ್ಯ ಜಿಲ್ಲೆಯಲ್ಲಿ ಕೊರೋನಾ ಹಿನ್ನಲೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೇರಿದೆ.