Monday, May 20, 2024

ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಸಾಧನೆ ಮಾಡಲಾಗಿದೆ ; ಸಚಿವ ಕೆ.ಎಸ್. ಈಶ್ವರಪ್ಪ.

ಶಿವಮೊಗ್ಗ: ಕಳೆದ ಒಂದು ವರ್ಷದ ಅವಧಿಯಲ್ಲಿ ಕುಡಿಯುವ ನೀರು, ಅಂತರ್ಜಲ ಅಭಿವೃದ್ಧಿ, ರಸ್ತೆ ಅಭಿವೃದ್ಧಿ, ಮೂಲಸೌಕರ್ಯ, ಉದ್ಯೋಗ ಸೃಷ್ಟಿ ಸೇರಿದಂತೆ, ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಸಾಧನೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಇಂದು ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಕಳೆದ ಒಂದು ವರ್ಷದ ಅವಧಿಯಲ್ಲಿ ಮಾಡಿರುವ ಸಾಧನೆಗಳ ವಿವರಗಳನ್ನು ನೀಡಿದ್ದಾರೆ. ಅಂತರ್ಜಲ ಯೋಜನೆಯಡಿ ಜಿಲ್ಲೆಯಲ್ಲಿ 27,754 ಕಾಮಗಾರಿಗಳನ್ನುಅನುಷ್ಡಾನಗೊಳಿಸಲಾಗುತ್ತಿದ್ದು, ಈಗಾಗಲೇ 1,444 ಕಾಮಗಾರಿಗಳು ಆರಂಭಗೊಂಡಿವೆ. ಜಲಾಮೃತ ಯೋಜನೆಯಡಿ ಕಳೆದ ಸಾಲಿನಲ್ಲಿ 28 ಕೆರೆಗಳನ್ನು 5.20 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದ್ದು, 2.40 ಕೋಟಿ ರೂ. ವೆಚ್ಚದಲ್ಲಿ 14 ಕೆರೆಗಳಿಗೆ ಈಗಾಗಲೇ ಕಾಯಕಲ್ಪ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಈ ವರ್ಷ ಜಿಲ್ಲೆಯ 281 ಜಲಮೂಲಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, 181 ಕೆರೆಗಳ ಅಭಿವೃದ್ಧಿಗೆ ಈಗಾಗಲೇ 10ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಪ್ರತಿ ಮನೆಗೆ ಶುದ್ಧ ನೀರು ಪೂರೈಸುವ ಮನೆಮನೆಗೆ ಗಂಗೆ ಯೋಜನೆಯಡಿ ಜಿಲ್ಲೆಯಲ್ಲಿ 28,8717 ಕುಟುಂಬಗಳಿಗೆ 1,176 ಕೋಟಿ ರೂ. ವೆಚ್ಚದಲ್ಲಿ ವೈಯಕ್ತಿಕ ನಲ್ಲಿ ಒದಗಿಸಲು ಯೋಜನೆ ರೂಪಿಸಲಾಗಿದೆ. ಪ್ರಥಮ ಹಂತದಲ್ಲಿ 369ಕೋಟಿ ರೂ. ಜಿಲ್ಲೆಗೆ ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಈಶ್ವರಪ್ಪ ಮಾಹಿತಿ ನೀಡಿದ್ದಾರೆ. ಅಲ್ಲದೇ, ನರೇಗಾ ಅಡಿ ಜಿಲ್ಲೆಯಲ್ಲಿ ಉತ್ತಮ ಸಾಧನೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಕೇವಲ 4ತಿಂಗಳ ಅವಧಿಯಲ್ಲಿ 22.47 ಲಕ್ಷ ಮಾನವ ದಿನಗಳನ್ನು ಸೃಷ್ಟಿಸಲಾಗಿರುವುದು ದಾಖಲೆಯಾಗಿದೆ. ಈ ವರ್ಷ ಹೊಸದಾಗಿ 6,822 ಹೊಸ ಉದ್ಯೋಗ ಚೀಟಿಗಳನ್ನು ವಿತರಿಸಿದ್ದು 4.80 ಕೋಟಿ ರೂ. ಕೂಲಿಯನ್ನು ಈಗಾಗಲೇ ಪಾವತಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ರಾಜ್ಯದಲ್ಲಿ 85ಸಾವಿರಕ್ಕೂ ಅಧಿಕ ರೈತರು ತಮ್ಮ ಜಮೀನುಗಳಲ್ಲಿ ಕಂದಕ ಬದು ಹಾಗೂ 35ಸಾವಿರಕ್ಕೂ ಹೆಚ್ಚು ಕೃಷಿ ಹೊಂಡಗಳನ್ನು ನಿರ್ಮಿಸಿರುವುದು ದಾಖಲೆಯಾಗಿದೆ. ಘನತ್ಯಾಜ್ಯ ವಿಲೇವಾರಿ: ಗ್ರಾಮೀಣ ಭಾಗದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಲು ಇದೇ ಮೊದಲ ಬಾರಿಗೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ 271 ಗ್ರಾಮ ಪಂಚಾಯತ್‍ಗಳ ಪೈಕಿ 50 ಗ್ರಾಮ ಪಂಚಾಯತ್‍ಗಳ ಪ್ರಸ್ತಾವನೆ ಸರ್ಕಾರ ಅನುಮೋದಿಸಿದ್ದು, ವಾಹನ ಖರೀದಿ ಸೇರಿದಂತೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದಿದ್ದಾರೆ. ರಾಜ್ಯದಲ್ಲಿ ಮೊದಲ ಹಂತದಲ್ಲಿ 3,620 ಕಿ.ಮೀ. ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದ್ದು, ಈಗಾಗಲೇ 909 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಇನ್ನುಳಿದ 2,063 ಕಿ ಮೀ ಉದ್ದದ ರಸ್ತೆ ನಿರ್ಮಾಣ ಪ್ರಸ್ತಾವನೆಯನ್ನು ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಇದರ ಜೊತೆಗೆ, ಪ್ರವಾಹದಿಂದ ಹಾನಿಗೊಳಗಾದ ರಸ್ತೆ ಹಾಗೂ ಸೇತುವೆಗಳ ನಿರ್ಮಾಣಕ್ಕಾಗಿ 1500 ಕೋಟಿ ರೂ. ವಿಶೇಷ ಅನುದಾನ ಒದಗಿಸಲಾಗಿದ್ದು, ಒಟ್ಟು 8972 ಕಾಮಗಾರಿಗಳು ಪೂರ್ಣಗೊಳ್ಳುವ ಹಂತದಲ್ಲಿದೆ ಎಂದು ತಿಳಿಸಿದ್ರು. ಇನ್ನು ಕುಡಿಯುವ ನೀರಿನ ಪೂರೈಕೆಗೆ ಕ್ರಮ ತೆಗೆದುಕೊಳ್ಳಲಾಗಿದ್ದು, ರಾಜ್ಯದ 49 ಬರಪೀಡಿತ ತಾಲೂಕುಗಳಿಗೆ ತಲಾ 1 ಕೋಟಿ ರೂ. ಹಾಗೂ ಇತರ ತಾಲೂಕುಗಳಿಗೆ ತಲಾ 50 ಲಕ್ಷ ರೂ. ಕುಡಿಯುವ ನೀರಿನ ಕಾಮಗಾರಿಗಳಿಗೆ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ 474 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಪೂರ್ಣಗೊಂಡಿದ್ದು, 1.15 ಕೋಟಿ ಗ್ರಾಮೀಣ ಜನರಿಗೆ ಕುಡಿಯುವ ನೀರು ಒದಗಿಸಲಾಗುತ್ತಿದೆ ಎಂದು ತಿಳಿಸಿದ್ರು. ರಾಜ್ಯದ ಎಲ್ಲಾ 6012 ಗ್ರಾಮ ಪಂಚಾಯತ್ ಕಚೇರಿ ಕಟ್ಟಡಗಳಿಗೆ 3.4ಲಕ್ಷ ರೂ. ವೆಚ್ಚದಲ್ಲಿ ಸೋಲಾರ್ ಅಳವಡಿಸಲು ಯೋಜನೆಯನ್ನು ರೂಪಿಸಲಾಗಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು.

RELATED ARTICLES

Related Articles

TRENDING ARTICLES