ಕೃಷಿ ಕಾಯ್ದೆ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ತೆಲಂಗಾಣ ರಾಜ್ಯ ಸರ್ಕಾರವು 3 ಲಕ್ಷ ಪರಿಹಾರ ಘೋಷಿಸಿದೆ. ದೆಹಲಿಯಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಈ ಕುರಿತು ಘೋಷಣೆ ಮಾಡಿದ್ದಾರೆ.
ರೈತ ಹೋರಾಟಕ್ಕೆ ನವೆಂಬರ್ 26 ರಂದು ಒಂದು ವರ್ಷ ತುಂಬಲಿದೆ. ವಿವಾದಿತ ಕೃಷಿ ಕಾನೂನುಗಳ ರದ್ದತಿ ಮತ್ತು ಕನಿಷ್ಟ ಬೆಂಬಲ ಬೆಲೆ ಖಾತರಿ ನೀಡುವ ಕಾನೂನು ಜಾರಿಗಾಗಿ ರೈತರು ಕಳೆದ ಒಂದು ವರ್ಷದಿಂದ ದೆಹಲಿಯ ಗಡಿಗಳಲ್ಲಿ ಹೋರಾಟ ಮಾಡುತ್ತಿದ್ದಾರೆ. ಒಕ್ಕೂಟ ಸರ್ಕಾರ ನವೆಂಬರ್ 19 ರಂದು ಈ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದೆ. ಆದರೆ, ಸಂವಿಧಾನಾತ್ಮಕವಾಗಿ ಕಾಯ್ದೆಗಳನ್ನು ರದ್ದುಗೊಳಿಸುವವರೆಗೂ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ ಎಂದು ರೈತ ನಾಯಕರು ಎಚ್ಚರಿಸಿದ್ದಾರೆ.
ರೈತ ಆಂದೋಲನದ ವೇಳೆ ಸಾವನ್ನಪ್ಪಿದ ರೈತರ ಕುಟುಂಬಕ್ಕೆ ತಮ್ಮ ಸರ್ಕಾರ ತಲಾ 3 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಿದೆ. ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಒತ್ತಾಯಿಸಿದ್ದಾರೆ.