Friday, November 22, 2024

ಕೊರೊನಾ ಸೋಂಕು ಹೆಚ್ಚಳ : ಸಿಎಂ ಮಹತ್ವದ ಸಭೆ

ರಾಜ್ಯ : ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಬಗ್ಗೆ ಇಂದು 4 ಗಂಟೆಗೆ ಆರೋಗ್ಯ ಅಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ವಿದೇಶದಲ್ಲಿ ಹೊಸ ರೂಪಾಂತರ ತಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು, ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾತನಾಡಿರುವ ಸಿಎಂ ಬೊಮ್ಮಾಯಿ, ಶಾಲೆಗಳು, ಹಾಸ್ಟಲ್​ಗಳಲ್ಲಿ ಕೊವಿಡ್ ಹೆಚ್ಚಾಗುತ್ತಿರುವ ಸಂಬಂಧ ಆತಂಕ ವ್ಯಕ್ತಪಡಿಸಿದ್ದಾರೆ. ‘‘ಶಾಲೆಗಳು, ಹಾಸ್ಟೆಲ್‌ಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಧಾರವಾಡ ಸೇರಿ ರಾಜ್ಯದ ಹಲವೆಡೆ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ಇಂದು ಸಂಜೆ ಕೋವಿಡ್ ತಜ್ಞರು, ಅಧಿಕಾರಿಗಳ ಜತೆ ಸಭೆ ಮಾಡುತ್ತಿದ್ದೇನೆ’’ ಎಂದು ಬೊಮ್ಮಾಯಿ ಹೇಳಿದ್ದಾರೆ.

ಸಭೆ ಬಳಿಕ ಮುಂದಿನ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತೇವೆ ಮತ್ತು ಜನರಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸುತ್ತೇವೆ. ಅಲ್ಲದೇ, ರಾಜ್ಯದಲ್ಲಿ ತಡ ಮಾಡದೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಕೊರೊನಾ ನಿಯಂತ್ರಣ, ಲಸಿಕೆ ಸಂಬಂಧ ಪ್ರಮುಖವಾಗಿ ಚರ್ಚೆಯಾಗಲಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಸಿಎಂ ಗೃಹ ಕಛೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ.

ಅಭಿವೃದ್ಧಿ ಆಯುಕ್ತರು, ಬಿಬಿಎಂಪಿ ಮುಖ್ಯ ಆಯುಕ್ತರು, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳು, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮೈಸೂರು, ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೂ ಸಭೆಗೆ ಆಹ್ವಾನ ನೀಡಲಾಗಿದೆ.

ವಿದೇಶದಲ್ಲಿ ಹೊಸ ರೂಪಾಂತರ ತಳಿ ಪತ್ತೆಯಾಗಿರುವುದರ ಕುರಿತೂ ಮಹತ್ವದ ಚರ್ಚೆ ನಡೆಯಲಿದೆ. ಈ ಸಂಬಂಧ ಸಭೆಯಲ್ಲಿ ಮಹತ್ವದ ಕೆಲ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ. ಏರ್ ಪೋರ್ಟ್ ಹಾಗೂ ರಾಜ್ಯದ ಗಡಿ ಭಾಗದಲ್ಲಿ ತೆಗೆದುಕೊಳ್ಳಬೇಕಾದ ‌ಬಿಗಿ ಕ್ರಮಗಳು, ಶಾಲೆಗಳಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು, ವಿದೇಶದಿಂದ ಬರುವವರಿಗೆ ಕ್ವಾರಂಟೈನ್ ಮಾಡುವುದು, ಗಡಿ ಭಾಗದಲ್ಲಿ ರಾಜ್ಯಕ್ಕೆ ಬಂದು ಹೋಗುವವರ ಮೇಲೆ ಯಾವ ರೀತಿ ನಿಗಾ ವಹಿಸಬೇಕು. ಹೀಗೆ ಹಲವು ಮಹತ್ವದ ವಿಚಾರಗಳು ಇಂದು ಸಂಜೆ ನಡೆಯುವ ಸಭೆಯಲ್ಲಿ ಚರ್ಚೆಯಾಗಲಿದ್ದು, ಆನಂತರ ನಿಯಮಾವಳಿಗಳನ್ನು ಘೋಷಿಸುವ ಸಾಧ್ಯತೆ ಇದೆ.

RELATED ARTICLES

Related Articles

TRENDING ARTICLES