ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳೆದ 3 ವಾರಗಳಿಂದ ಮಳೆಯ ಅಬ್ಬರ ಜೋರಾಗಿದೆ.ಮಳೆಯ ಜೊತೆಗೆ ಚಳಿಯೂ ಸೇರಿ 50 ವರ್ಷಗಳ ದಾಖಲೆಯನ್ನು ಬೆಂಗಳೂರು ಹಿಂದಿಕ್ಕಿದೆ.
ಕರ್ನಾಟಕದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿ ಮೇ 27ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ. ಬಳಿಕ ಮೂರ್ನಾಲ್ಕು ದಿನಗಳಲ್ಲಿ ಮಾನ್ಸೂನ್ ಮಂಗಳೂರನ್ನು ಪ್ರವೇಶಿಸಿ, ಕರ್ನಾಟಕಕ್ಕೆ ಎಂಟ್ರಿ ಕೊಡಲಿದೆ. ಅಸಾನಿ ಚಂಡಮಾರುತ ದುರ್ಬಲಗೊಂಡಿದ್ರೂ ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆಯಾಗಲಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.