Thursday, January 23, 2025

ಬಸವಣ್ಣನವರ ಪಠ್ಯ ಮತ್ತೆ ಪರಿಷ್ಕರಣೆ : ಸಿ ಎಂ ಬೊಮ್ಮಾಯಿ

ಬೆಂಗಳೂರು: ಪಠ್ಯಪುಸ್ತಕದಲ್ಲಿ ಬಸವಣ್ಣನವರ ಕುರಿತ ಅಂಶವನ್ನು ಸೂಕ್ತ ಪರಿಷ್ಕರಣೆ ಮಾಡುವುದರ ಜೊತೆಗೆ ನಾಡಗೀತೆ ವಿಕೃತಗೊಳಿಸಿದ ವ್ಯಕ್ತಿಗಳ ಬಗ್ಗೆ ಕಾನೂನಾತ್ಮಕ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಜತೆ ಸಭೆ ನಡೆಸಿದ ಬಳಿಕ ಅವರು ಶುಕ್ರವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಪ್ರಸ್ತುತ ಪರಿಷ್ಕರಿಸಿದ ಪಠ್ಯಪುಸ್ತಕದಲ್ಲಿ ಯಾವುದೇ ಆಕ್ಷೇಪಾರ್ಹ ವಿಷಯಗಳು ಇದ್ದಲ್ಲಿ ಅವುಗಳನ್ನು ಮತ್ತೊಮ್ಮೆ ಪರಿಷ್ಕರಿಸಲು ಸರ್ಕಾರ ಮುಕ್ತ ಮನಸ್ಸು ಹೊಂದಿದೆ ಎಂದು ಹೇಳಿದ್ದಾರೆ.

ಇನ್ನು ಪಠ್ಯಪುಸ್ತಕ ಪರಿಷ್ಕರಣೆ ಕಾರ್ಯ ಮುಗಿದಿರುವುದರಿಂದ ಹಾಲಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿಸರ್ಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆಯ ಸಮಿತಿ ರಚಿಸಿದ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿ ರಾಷ್ಟ್ರಕವಿ ಕುವೆಂಪು ಕುರಿತಾದ 7 ಗದ್ಯ ಮತ್ತು ಪದ್ಯಗಳು ಸೀಮಿತವಾಗಿದ್ದರೆ, ಪ್ರಸ್ತುತ ಪರಿಷ್ಕರಣಾ ಸಮಿತಿ 10ಕ್ಕೆ ಏರಿಸಿದೆ ಎಂದು ಸಿಎಂ ತಿಳಿಸಿದರು.

ನಾಡಪ್ರಭು ಕೆಂಪೇಗೌಡರ ಕುರಿತಾದ ಪಾಠವನ್ನು ಹೊಸದಾಗಿ ಸೇರಿಸಲಾಗಿದೆ. ಈ ಹಿಂದಿನ ಪಠ್ಯ ಪುಸ್ತಕದಲ್ಲಿ ಪರಿಚಯಿಸಲಾಗಿದ್ದ ಇಸ್ಲಾಂ ಮತ್ತು ಕ್ರೈಸ್ತ ಧರ್ಮದ ಜೊತೆಗೆ ಹಿಂದೂ ಧರ್ಮದ ವಿಷಯವನ್ನೂ ಸೇರ್ಪಡೆ ಮಾಡಿ ಪರಿಚಯಿಸಲಾಗಿದೆ ಎಂದರು.

ಶಾಲಾ ಪಠ್ಯಕ್ರಮ ಕಾಲ ಕಾಲಕ್ಕೆ ತಕ್ಕಂತೆ ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಜಾರಿಯಾದ ಕೆಲವು ಪಠ್ಯಪುಸ್ತಕದಲ್ಲಿ ಕೆಲವು ಆಕ್ಷೇಪಾರ್ಹ ಅಂಶಗಳಿದ್ದವು. ಆದ ಕಾರಣ ಸಮಾಜ ವಿಜ್ಞಾನ ಮತ್ತು ಕನ್ನಡ ಭಾಷಾ ವಿಷಯಕ್ಕೆ ಸಂಬಂಧಿಸಿದಂತೆ ಪಠ್ಯದಲ್ಲಿ ಅಲ್ಪ ಪರಿಷ್ಕರಣೆ ಮಾಡಲಾಗಿದೆ ಎಂದರು.

ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶಯದಂತೆ ಕುವೆಂಪು ಬರೆದ ನಾಡಗೀತೆಯನ್ನು ವಿಕೃತಗೊಳಿಸಿದವರ ವಿರುದ್ಧ ಸೈಬರ್ ಕ್ರೈಮ್ ಘಟಕದ ಮೂಲಕ ತನಿಖೆ ನಡೆಸಲಾಗುವುದು ಎಂದೂ ಅವರು ಹೇಳಿದ್ದಾರೆ.

RELATED ARTICLES

Related Articles

TRENDING ARTICLES