ದೆಹಲಿ: ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಇ.ಡಿ. ಮೂಲಕ ಕಿರುಕುಳ ನೀಡುತ್ತಿರುವ ಹಾಗೂ ಅಗ್ನಿಪಥ್ ಯೋಜನೆ ಮೂಲಕ ದೇಶದ ಭದ್ರತೆ ಮತ್ತು ಯುವಕರ ಭವಿಷ್ಯಕ್ಕೆ ಬೆಂಕಿಯಿಡಲು ಯತ್ನಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಎಐಸಿಸಿ ಕಚೇರಿ ಆವರಣದಲ್ಲಿ ಬುಧವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಪಕ್ಷದ ವರಿಷ್ಟರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ. ಸಿ. ವೇಣುಗೋಪಾಲ್, ಕರ್ನಾಟಕದಲ್ಲಿ ಪಕ್ಷದ ಉಸ್ತುವಾರಿ ವಹಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ ಮತ್ತಿತರ ಮುಖಂಡರು ಭಾಗವಹಿಸಿದ್ದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಡಿ ವಿಚಾರಣೆ ಕೇವಲ 4 ಗಂಟೆಯಲ್ಲಿ ನಡೆಯಬೇಕಾದ ವಿಚಾರಣೆ ಆದರೆ ಇಷ್ಟು ದಿನ ವಿಚಾರಣೆ ಹೆಸರಿನಲ್ಲಿ ರಾಹುಲ್ ಗಾಂಧಿಗೆ ಕಿರುಕುಳ ನೀಡುತ್ತಿದೆ ಎಂದು ಗುಡುಗಿದರು.
ಅಲ್ಲದೇ ಈ ಹಿಂದೆಯೇ ನ್ಯಾಷನಲ್ ಹೆರಾಲ್ಡ್ ಹಗರಣ ಪ್ರಕರಣ ಮುಗಿದು ಹೋಗಿದೆ. ಆದರೆ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಇನ್ನು ರಾಹುಲ್ ಗಾಂಧಿ ವಿರುದ್ಧ ಇಡಿ ನಡೆಸುತ್ತಿರುವ ವಿಚಾರಣೆಗೆ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದು, ಇದೊಂದು ರಾಜಕೀಯ ಪ್ರೇರಿತ ವಿಚಾರಣೆ. ನಮ್ಮ ಪಕ್ಷದ ನಾಯಕರ ತೆಜೋವಧೆ ಮಾಡುವುದಕ್ಕೆ ಪಕ್ಷಕ್ಕೆ ಕಪ್ಪು ಚುಕ್ಕೆ ತರುವುದಕ್ಕೆ ಬಿಜೆಪಿ ಈ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
============