ಕೊಡಗು: ಸಂಕಷ್ಟದ ಕಾಲದಲ್ಲಿ ಜನರೊಂದಿಗೆ ಸರ್ಕಾರ ನಿಂತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲರನ್ನೂ ತೊಡಗಿಸಿಕೊಂಡು ಹಾಗೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲರನ್ನೂ ತೊಡಗಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ. ಉಡುಪಿಯಲ್ಲಿ ಸಚಿವ ಎಸ್. ಅಂಗಾರ, ಸುನೀಲ್ ಕುಮಾರ್ ಮಂಗಳೂರಿನಲ್ಲಿ, ಉತ್ತರ ಕನ್ನಡದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಎಸ್.ಟಿ ಸೋಮಶೇಖರ್ ಅವರು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.
ಕಂದಾಯ ಸಚಿವರು ಕೊಡಗು ಮಂಗಳೂರಿಗೆ ಹೋಗಿ ಬಂದಿದ್ದಾರೆ. ಇಡೀ ಸರ್ಕಾರವೇ ಈ ಬಗ್ಗೆ ಕಾರ್ಯನಿರ್ವಹಿಸುತ್ತಿದೆ. ನಾನೂ ಸಹ ಇಂದು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯವಿರುವ ಸೂಚನೆ ಸಲಹೆಗಳನ್ನು ನೀಡುತ್ತೇನೆ ಎಂದರು. ಬೆಳೆ ಹಾನಿ ಅಂದಾಜು ಮಾಡಿದ ನಂತರ ಕೇಂದ್ರದಿಂದ ಪರಿಹಾರ ಕೇಳುವ ಬಗ್ಗೆ ತೀರ್ಮಾನಿಸಲಾಗುವುದು. ಎನ್‌ಡಿಆರ್‌ಎಫ್‌ನಲ್ಲಿ 730 ಕೋಟಿ ರೂ.ಗಳು ಲಭ್ಯವಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ ಎಂದರು.