ಮೈಸೂರು : ಚಾಮುಂಡೇಶ್ವರಿ ದೇವಿಯ ವರ್ಧಂತಿ ಪ್ರಯುಕ್ತ ಇಂದು ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಅಮ್ಮನವರ ಜನ್ಮದಿನವೇ ಆಕೆಯ ದರ್ಶನ ಪಡೆಯಲು, ಭಕ್ತರು ಹೊತ್ತು ಮೂಡುವ ಮುನ್ನವೇ ಸರತಿ ಸಾಲಿನಲ್ಲಿ ನಿಂತಿದ್ದರು. ವರ್ಧಂತಿ ಪ್ರಯುಕ್ತ ಮುಂಜಾನೆಯಿಂದಲೇದೇವಿಗೆ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಸಹಸ್ರನಾಮಾರ್ಚನೆ ಮತ್ತು ಇತರ ಪೂಜಾ ಕೈಂಕರ್ಯಗಳು ನಡೆದವು.
ಸಂಪ್ರದಾಯದಂತೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನಾಡ ಅದೇವತೆಗೆ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಗಿದೆ. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜಮಾತೆ ಪ್ರಮೋದಾದೇವಿ ಒಡೆಯರ್ ಪೂಜೆಯಲ್ಲಿ ಭಾಗಿಯಾಗಿದ್ದರು. ಚಿನ್ನದ ಪಲ್ಲಕ್ಕಿಯಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಚಿನ್ನದ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ದೇವಸ್ಥಾನದ ಸುತ್ತ ಮೆರವಣಿಗೆ ಮಾಡಲಾಯಿತು. ಈ ವೇಳೆ 21 ಕುಶಾಲತೋಪು ಸಿಡಿಸುವ ಮೂಲಕ ತಾಯಿಗೆ ಗೌರವ ಅರ್ಪಿಸಲಾಯಿತು. ಬ್ಯಾಂಡ್, ಮಂಗಳವಾದ್ಯ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿವೆ. ಸಹಸ್ರಾರು ಭಕ್ತರು ಪಾಲ್ಗೊಂಡು ವೈಭವವನ್ನು ಕಣ್ತುಂಬಿಸಿಕೊಂಡು ಪುನೀತರಾದರು.