ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಜಾವೆಲಿನ್ ಪಟು ನೀರಜ್ ಚೋಪ್ರಾ ಬೆಳ್ಳಿ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಾಲ್ಕನೇ ಸುತ್ತಿನಲ್ಲಿ ನೀರಜ್ ಚೋಪ್ರಾ 88.13 ಮೀಟರ್ ದೂರ ಎಸೆಯುವ ಮೂಲಕ ರಜತ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಅಂಜು ಬಾಬಿ ಜಾರ್ಜ್ ಬಳಿಕ ಪದಕ ಜಯಿಸಿದ ಎರಡನೇ ಭಾರತೀಯ ಅಥ್ಲೀಟ್ ಎನ್ನುವ ಹಿರಿಮೆಗೆ ನೀರಜ್ ಪಾತ್ರರಾಗಿದ್ದಾರೆ. ಯುಜೀನ್‌ನಲ್ಲಿ ನಡೆದ ಜಾವೆಲಿನ್ ಥ್ರೋ ಫೈನಲ್‌ನ ಮೊದಲ ಪ್ರಯತ್ನದಲ್ಲಿ ಪೌಲ್ ಮಾಡಿದರು.
ಇನ್ನು ನೀರಜ್ ಚೋಪ್ರಾ ತಮ್ಮ ಪಾಲಿನ 2ನೇ ಪ್ರಯತ್ನದಲ್ಲಿ 82.39 ಮೀಟರ್ ದೂರ ಜಾವೆಲಿನ್ ಎಸೆದರು. ಮೂರನೇ ಸುತ್ತಿನಲ್ಲಿ ನೀರಜ್ ಚೋಪ್ರಾ 86.37 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಮೂರನೇ ಸುತ್ತಿನ ಅಂತ್ಯದ ವೇಳೆಗೆ ನೀರಜ್ ಚೋಪ್ರಾ 4ನೇ ಸ್ಥಾನ ಪಡೆದರು. ಆದರೆ 4ನೇ ಸುತ್ತಿನಲ್ಲಿ ನೀರಜ್ ಚೋಪ್ರಾ 88.13 ಮೀಟರ್ ದೂರ ಎಸೆಯುವ ಮೂಲಕ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟರು.