Wednesday, May 22, 2024

ಕಾಂಗ್ರೆಸ್​ ಶಾಸಕ ಪ್ರಿಯಾಂಕ್‌ ಖರ್ಗೆ ವಿರುದ್ಧ ಮಹಿಳಾ ಆಯೋಗಕ್ಕೆ ದೂರು.!

ಬೆಂಗಳೂರು: ರಾಜ್ಯದ ಯುವತಿಯರು ಸರ್ಕಾರಿ ಕೆಲಸ ಪಡೆಯಬೇಕಾದರೆ ಮಂಚ ಹತ್ತಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸಚಿವ ಪ್ರಿಯಾಂಕ ಖರ್ಗೆ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಸಿತು.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿಯ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, ಮಾಜಿ ಸಚಿವರಾದ ಪ್ರಿಯಾಂಕ ಖರ್ಗೆಯವರು ಆಗಸ್ಟ್‌ 12, 2022ರಂದು ಕಲಬುರಗಿಯಲ್ಲಿ ಪತ್ರಿಕಾಗೊಷ್ಠಿಯಲ್ಲಿ ಮಾತನಾಡುವಾಗ ಮಹಿಳೆಯರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ಇದು ಲಂಚ-ಮಂಚದ ಸರಕಾರ, ಯುವಕರಿಗೆ ನೌಕರಿ ಬೇಕಂದ್ರೆ ಲಂಚ ಕೊಡಬೇಕು. ಯುವತಿಯರಿಗೆ ನೌಕರಿ ಬೇಕೆಂದರೆ ಮಂಚ ಹತ್ತಬೇಕು ಎನ್ನುವ ಕೀಳು ಹೇಳಿಕೆಯನ್ನು ನೀಡಿದ್ದಾರೆ. ಇದು ಉದ್ಯೋಗಸ್ಥ ಹಾಗೂ ಉದ್ಯೋಗಾಕಾಂಕ್ಷಿ ಮಹಿಳೆಯರಿಗೆ ಮಾಡಿರುವ ಅವಮಾನವಾಗಿದ್ದು, ಮಹಿಳಾ ಆಯೋಗವು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಕೀಳು ಹೇಳಿಕೆ ನೀಡುವುದು ಹೊಸತೇನಲ್ಲ. ಆದರೆ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಪ್ರಮುಖ ಪಾತ್ರವಹಿಸಿರುವ ರಾಜಕೀಯ ಕುಟುಂಬದ ಕುಡಿಯಾಗಿರುವ ಪ್ರಿಯಾಂಕ್‌ರವರು ಸರಕಾರಿ ಕೆಲಸ ಪಡೆಯುವ ಎಲ್ಲಾ ಮಹಿಳಾ ಅಭ್ಯರ್ಥಿಗಳ ಮೇಲೆ ಕಪ್ಪು ಚುಕ್ಕೆಯನ್ನು ಬರುವಂತಹ ಈ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯ ತೀವ್ರತೆಯನ್ನು ಗಮನಿಸಿ ರಾಜ್ಯ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು ಎಂದು ಮಾಧ್ಯಮ ವಕ್ತಾರೆ ಉಷಾ ಮೋಹನ್ ಒತ್ತಾಯಿಸಿದರು.

RELATED ARTICLES

Related Articles

TRENDING ARTICLES