ನವದೆಹಲಿ : ಕಾಂಗ್ರೆಸ್ ಪಕ್ಷಕ್ಕೆ ಇದು ಸಂಕಷ್ಟ ಕಾಲ. ಒಂದ್ಕಡೆ, ಎಐಸಿಸಿ ಅಧ್ಯಕ್ಷ ಪಟ್ಟಕ್ಕಾಗಿ ಕಸರತ್ತು ನಡೆಯುತ್ತಿದ್ರೆ, ಮತ್ತೊಂದು ಕಡೆ ಕೈ ನಾಯಕರು ಪಕ್ಷದ ವಿರುದ್ಧವೇ ತೊಡೆ ತಟ್ಟಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ಸಿಡಿದೆದ್ದು ಪಕ್ಷ ತೊರೆದಿರುವ ಗುಲಾಂ ನಬಿ ಆಜಾದ್ ಸ್ವಂತ ಪಕ್ಷ ಕಟ್ಟಲಿದ್ದಾರೆ. ಇದೀಗ, ಆಜಾದ್ ಗುಂಪು ಸೇರುವ ಉದ್ದೇಶದಿಂದ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ 64 ಜಮ್ಮು-ಕಾಶ್ಮೀರದ ಕೈ ನಾಯಕರು.
ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಎಲ್ಲಾ ನಾಯಕರು ಜಂಟಿ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದ್ದಾರೆ. ಚಾಂದ್ ಮತ್ತು ಮಾಜಿ ಸಚಿವರಾದ ಅಬ್ದುಲ್ ಮಜಿದ್ ವಾನಿ, ಮನೋಹರ್ ಲಾಲ್ ಶರ್ಮಾ, ಘಾರು ರಾಮ್ ಮತ್ತು ಮಾಜಿ ಶಾಸಕ ಬಲ್ವಾನ್ ಸಿಂಗ್ ಸೇರಿದಂತೆ ಹಲವರು ತಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು.
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಅವರು ಶುಕ್ರವಾರ ಕಾಂಗ್ರೆಸ್ ಜೊತೆಗಿನ ಐದು ದಶಕಗಳ ಒಡನಾಟವನ್ನು ಕೊನೆಗೊಳಿಸಿದರು. ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರವಾನಿಸಿದ ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಆಜಾದ್, ‘ಕಳೆದ ಎಂಟು ವರ್ಷಗಳಲ್ಲಿ ಕಾಂಗ್ರೆಸ್ ನಾಯಕತ್ವದ ಚುಕ್ಕಾಣಿಯನ್ನು ಗಂಭೀರವಲ್ಲದ ವ್ಯಕ್ತಿಯೊಬ್ಬರ ಕೈಗೆ ನೀಡಲು ಯತ್ನಗಳು ನಡೆದವು. ಪಕ್ಷಕ್ಕೊಸ್ಕರ ಜೀವನವನ್ನೇ ಮುಡಿಪಾಗಿಟ್ಟ ಪ್ರಮುಖ ನಾಯಕರನ್ನು ಕಡೆಗಣಿಸಲಾಯಿತು. ಕಾಂಗ್ರೆಸ್ನ ಇಂದಿನ ಪರಿಸ್ಥಿತಿಗೆ ಇದೆಲ್ಲವೂ ಕಾರಣ’ ಎಂದು ವಾಗ್ದಾಳಿ ನಡೆಸಿದ್ದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ವೇಳೆಗೆ ಹೊಸ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಮಾಜಿ ಸಚಿವರು ಮತ್ತು ಶಾಸಕರು ಸೇರಿದಂತೆ ಹನ್ನೆರಡು ಪ್ರಮುಖ ಕಾಂಗ್ರೆಸ್ ನಾಯಕರು, ನೂರಾರು ಪಂಚಾಯತ್ ರಾಜ್ ಸಂಸ್ಥೆಯ ಸದಸ್ಯರು, ಪುರಸಭೆ ಕಾರ್ಪೊರೇಟರ್ಗಳು ಮತ್ತು ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ನಾಯಕರು ಈಗಾಗಲೇ ಆಜಾದ್ ಅವರನ್ನು ಬೆಂಬಲಿಸಿ ಕಾಂಗ್ರೆಸ್ ತೊರೆದಿದ್ದಾರೆ.