Monday, December 23, 2024

ನಮ್ಮ ಶಾಸಕರು ನಾವೇ ಗೆಲ್ಲುತ್ತೆವೆ ಎಂದು ಭ್ರಮೆಯಲ್ಲಿರಬೇಡಿ: ಯಡಿಯೂರಪ್ಪ

ಶಿವಮೊಗ್ಗ: ಹಾಲಿ ಶಾಸಕರು ನಾವು ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿರದೇ ತಮ್ಮ ಕ್ಷೇತ್ರದ ಉದ್ದಗಲಕ್ಕೂ ಸಂಚರಿಸಿ ಮತದಾರರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ಬಿಜೆಪಿ ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ರಾಷ್ಟ್ರೀಯ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡ ಹಿನ್ನಲೆಯಲ್ಲಿ ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದ್ದಾರೆ.

ನನ್ನ ಮೇಲೆ ವಿಶ್ವಾಸವಿಟ್ಟು ಕೇಂದ್ರೀಯ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದಾರೆ. ಮುಂದಿನ ಚುನಾವಣೆಗೆ ರಾಜ್ಯದ ಉದ್ದಗಲಕ್ಕೂ ಸಂಚರಿಸಿ 150 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಿದಾಗ ಅವರೂ 150 ಸ್ಥಾನದ ಗುರಿ ನೀಡಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ರಾಜ್ಯ ಪ್ರವಾಸ ಮಾಡುತ್ತೇವೆ.

ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಪ್ರಯತ್ನ ನಡೆಸುತ್ತೇವೆ ಎಂದರು. ಇನ್ನು ಪ್ರಚಾರಕ್ಕೆ ನರೇಂದ್ರ ಮೊದಿಯವರೂ ಬರುವುದಾಗಿ ಹೇಳಿದ್ದಾರೆ.

ತಿಂಗಳಿಗೊಮ್ಮೆ ರಾಜ್ಯಕ್ಕೆ ಖುದ್ದಾಗಿ ಬರುವುದಾಗಿ ಪ್ರಧಾನಿ ಅವರೇ ಹೇಳಿದ್ದಾರೆ. ಮೋದಿಜೀ ಅವರನ್ನು ಕರೆಸುವ ಕೆಲಸ ಮಾಡಲಾಗುವುದು. ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟಾಧ್ಯಕ್ಷ ಜೆ.ಪಿ. ನಡ್ಡಾರವರಿಗೆ ಧನ್ಯವಾದ ಸಮರ್ಪಿಸುತ್ತೇನೆ ಎಂದು ಹೇಳಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲಬೇಕೆಂಬುದು ಪ್ರಧಾನಿ ಮೋದಿ ಅವರ ಅಪೇಕ್ಷೆಯಾಗಿದ್ದು, ಆ ನಿಟ್ಟಿನಲ್ಲಿ ಪ್ರತಿ ತಿಂಗಳಿಗೊಮ್ಮೆ ರಾಜ್ಯಕ್ಕೆ ಭೇಟಿ ನೀಡುತ್ತೇನೆ ಎಂದು ಪ್ರಧಾನಿ ಹೇಳಿರುವುದರಿಂದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈಗಿನಿಂದಲೇ ಪಕ್ಷದ ಸಂಘಟನೆ ಹಾಗೂ ಚುನಾವಣೆಗೆ ಸಿದ್ಧರಾಗಬೇಕು ಎಂದು ಹೇಳಿದರು.

RELATED ARTICLES

Related Articles

TRENDING ARTICLES