ಪಂಜಾಬ್ : ಕಾಂಗ್ರೆಸ್ ಪಕ್ಷದ ವಿರುದ್ಧ ಬಂಡಾಯವೆದ್ದು ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಪಂಜಾಬ್ ಮಾಜಿ ಸಿಎಂ ಅಮರೀಂದರ್ ಸಿಂಗ್ ಬಳಿಕ ಪಂಜಾಬ್ ಲೋಕ ಕಾಂಗ್ರೆಸ್ ಎಂಬ ತಮ್ಮದೇ ಹೊಸ ಪಕ್ಷ ಕಟ್ಟಿದ್ದರು. ಇದೀಗ ಅವರು ತಮ್ಮ ಹೊಸ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲು ಸಜ್ಜಾಗಿದ್ದು, ಇಂದು ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬಿಜೆಪಿಗೆ ಸೇರಲಿದ್ದಾರೆ.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಬದಲಿಗೆ ಚರಣ್ಜಿತ್ ಸಿಂಗ್ ಚನ್ನಿ ಅವರನ್ನು ಪಂಜಾಬ್ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಲಾಗಿತ್ತು. ಇದರಿಂದ ಅಮರೀಂದರ್ ಸಿಂಗ್ ಅಸಮಾಧಾನಗೊಂಡು, ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದರು.
ಇನ್ನು, ಕಾಂಗ್ರೆಸ್ ತೊರೆದ ನಂತರ ಅವರು ಪಂಜಾಬ್ ಲೋಕ ಕಾಂಗ್ರೆಸ್ ರಚಿಸಿದ್ದರು. 80 ವರ್ಷದ ಅಮರೀಂದರ್ ಸಿಂಗ್ ಇಂದು ದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರಲಿದ್ದಾರೆ. ಪಂಜಾಬ್ ಲೋಕ ಕಾಂಗ್ರೆಸ್ಗೆ ಸೇರ್ಪಡೆಗೊಂಡ 7 ಮಾಜಿ ಶಾಸಕರು ಮತ್ತು ಒಬ್ಬ ಮಾಜಿ ಸಂಸದರು ಕೂಡ ಇಂದು ಬಿಜೆಪಿಗೆ ಸೇರಲಿದ್ದಾರೆ.