ಧಾರವಾಡ : ಕಳೆದ ಮೂರು ದಿನಗಳಿಂದ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಜಿಲ್ಲಾಧಿಕಾರಿ ಕಚೇರಿಯ ಒಳಗಡೆ ಬಿಡಾರ ಹೂಡಿರುವ ಅನ್ನದಾತರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಕೇಂದ್ರ ಸರ್ಕಾರ ಪ್ರತಿ ಟನ್ ಕಬ್ಬಿಗೆ 3050 ರೂಪಾಯಿ ದರ ನಿಗದಿ ಮಾಡಿದ್ದು, ಕಬ್ಬು ಬೆಳೆಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಕನಿಷ್ಠ ಪಕ್ಷ ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ದರ ನಿಗದಿ ಮಾಡಬೇಕೆಂದು ಕಬ್ಬು ಬೆಳೆಗಾರರು ಆಗ್ರಹಿಸಿದ್ದಾರೆ.
ಕಬ್ಬು ದರ ನಿಗದಿಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರ ನಾಲ್ಕು ಸಭೆಗಳನ್ನು ಮಾಡಿದೆ. ಆದ್ರೆ, ಸಕ್ಕರೆ ಕಾರ್ಖಾನೆ ಮಾಲೀಕರ ಲಾಬಿಗೆ ಮಣಿದಿರುವ ಸರ್ಕಾರ ರೈತರಿಗೆ ಮೋಸ ಮಾಡುತ್ತಿದೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರು ತಮ್ಮ ವೇತನವನ್ನು ನೂರು ಪಟ್ಟು ಹೆಚ್ಚಳ ಮಾಡಿಕೊಂಡಿದ್ದಾರೆ. ಆದ್ರೆ, ಕಬ್ಬು ಬೆಳೆಗಾರರಿಗೆ ಹೆಚ್ಚಿನ ದರ ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಕ್ಕರೆ ಸಚಿವರು ಧಾರವಾಡ ಜಿಲ್ಲೆಯವರಾಗಿದ್ದು, ಜಿಲ್ಲೆಯಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದರೂ ಸಹ ಕ್ಯಾರೇ ಎನ್ನುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಬುಧವಾರದಿಂದ ಬಾರುಕೋಲು ಚಳವಳಿಗೆ ಕರೆ ನೀಡಿರುವ ರೈತರು, ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಣಯಿಸಿದ್ದಾರೆ.