Wednesday, January 22, 2025

ಶರಾವತಿ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಸಿಗುವವರೆಗೂ ಹೋರಾಟ: ಮಧು ಬಂಗಾರಪ್ಪ

ಶಿವಮೊಗ್ಗ: ಶರಾವತಿ ಸಂತ್ರಸ್ಥರಿಗೆ ಶಾಶ್ವತ ಪರಿಹಾರ ಸಿಗುವ ತನಕ ಕಾಂಗ್ರೆಸ್ ಬಹುದೊಡ್ಡ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದ್ದಾರೆ.

ಇಂದು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಅವರು, ಶರಾವತಿ ಸಂತ್ರಸ್ಥರ ಸಮಸ್ಯೆಯನ್ನು ಬಿಜೆಪಿ ಸರ್ಕಾರ ದ್ವಿಗುಣಗೊಳಿಸುತ್ತಿದೆ. ಅರಣ್ಯ ಅಧಿಕಾರಿಗಳು ಸಂತ್ರಸ್ಥರಿಗೆ ನೋಟಿಸ್ ನೀಡುವ ಮೂಲಕ ಕಿರುಕುಳ ನೀಡುತ್ತಿದ್ದಾರೆ. ಸುಮಾರು 18 ಸಾವಿರಕ್ಕೂ ಅಧಿಕ ಕುಟುಂಬಗಳು ಅತಂತ್ರವಾಗಿವೆ. ನಾವು ಸುಮ್ಮನಿರುವುದಿಲ್ಲ. ಹಿರಿಯರಾದ ಕಾಗೋಡು ತಿಮ್ಮಪ್ಪ ಅವರ ಮಾರ್ಗದರ್ಶನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನೂ ಒಳಗೊಂಡಂತೆ ಬಹುದೊಡ್ಡ ಹೋರಾಟ ಪ್ರಾರಂಭಿಸುತ್ತೇವೆ ಎಂದಿದ್ದಾರೆ.

ಕೇಂದ್ರ ಅರಣ್ಯ ಹಕ್ಕು ಕಾಯಿದೆ, ಶರಾವತಿ ಮುಳುಗಡೆ ಸಂತ್ರಸ್ತರ ಭೂಹಕ್ಕಿನ ಕಾಯಿದೆ ಸಮರ್ಪಕ ಅನುಷ್ಟಾನ, ಬಗರ್ ಹುಕುಂ ಸಮಸ್ಯೆ ಹಾಗೂ ಅಡಿಕೆ ಬೆಳೆಗಾರ ಸಮಸ್ಯೆ ಕುರಿತಂತೆ ಅಧ್ಯಯನ ವರದಿ ಸಲ್ಲಿಸಲು ಕೆಪಿಸಿಸಿಯಿಂದ 9 ಜನರ ತಾಂತ್ರಿಕ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಕರ್ತವ್ಯ ಲೋಪದಿಂದಾಗಿ ಇಂದು ಶರಾವತಿ ಮುಳುಗಡೆ ಸಂತ್ರಸ್ತರು ಜಮೀನು ಕಳೆದುಕೊಳ್ಳುವ ಸ್ಥಿತಿ ಎದುರಾಗಿದೆ. ಪರಿಸರವಾದಿಗಳ ಹೆಸರಿನಲ್ಲಿ ಕೆಲವರು ಹೈಕೋರ್ಟ್ ಗೆ ಹೋಗಿರುವುದರಿಂದ ಡಿ ನೋಟಿಫಿಕೇಶನ್ ರದ್ದಾಗಿದೆ. ಇದು ಇಡೀ ಶರಾವತಿ ಮುಳುಗಡೆ ಸಂತ್ರಸ್ತರ ಬದುಕಿನ ಪ್ರಶ್ನೆಯಾಗಿದೆ ಎಂದು ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾನೂನು ಮಾಡಿ ಸಂತ್ರಸ್ತರನ್ನು ಕೂರಿಸಿದ್ದೇ ಸರ್ಕಾರ. ಆದರೆ ಈಗ ಖುಲ್ಲಾ ಮಾಡುವುದಾಗಿ ಹೇಳುತ್ತಿರುವುದು ಸರ್ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಳುಗಡೆ ಸಂತ್ರಸ್ಥರನ್ನು ಮತ್ತೆ ಮುಳುಗಡೆ ಮಾಡುವ ಹುನ್ನಾರವನ್ನು ಬಿಜೆಪಿ ಸರ್ಕಾರ ಮತ್ತು ಅರಣ್ಯಾಧಿಕಾರಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದು, ಶರಾವತಿ ಮುಳುಗಡೆ ಸಂತ್ರಸ್ತರು ಅತಂತ್ರರಾಗಲು ಸೊರಬ ಹಾಗೂ ಸಾಗರ ಶಾಸಕರೇ ನೇರ ಕಾರಣರಾಗಿದ್ದಾರೆ ಎಂದು ಕುಮಾರ್ ಬಂಗಾರಪ್ಪ ವಿರುದ್ಧ ಕಿಡಿ ಕಾರಿದ್ದಾರೆ.

RELATED ARTICLES

Related Articles

TRENDING ARTICLES