ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕುರಿತು ನವೆಂಬರ್ 23ರಂದು ಸುಪ್ರೀಂ ಕೋರ್ಟ್ನಲ್ಲಿ ಅಂತಿಮ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಮುಂಬೈನ ಸಹ್ಯಾದ್ರಿ ಅತಿಥಿ ಗೃಹದಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ, ಶಿವಸೇನೆ, ಎನ್ಸಿಪಿ, ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ. ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಬೀದರ್, ಬಾಲ್ಕಿ, ಖಾನಾಪುರ, ಕಾರವಾರ ಮುಂತಾದ ಗಡಿ ಭಾಗಗಳಲ್ಲಿರುವ 865 ಮರಾಠಿ ಭಾಷಿಕ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ವಾದವನ್ನು ಮಹಾರಾಷ್ಟ್ರ ಏಕೀಕರಣ ಸಮಿತಿ ಮಂಡಿಸಿತ್ತು.
ಮಹಾರಾಷ್ಟ್ರ ಸರ್ಕಾರ ಕೂಡ ಇದಕ್ಕೆ ಬೆಂಬಲ ನೀಡಿತ್ತು. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ 1966ರಲ್ಲಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೆಹರ್ ಚಂದ್ ಮಹಾಜನ್ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಆ ಸಮಿತಿ 1967ರಲ್ಲಿ ಸಲ್ಲಿಸಿದ ವರದಿಯಲ್ಲಿ ಬೆಳಗಾವಿ ಸೇರಿ ಗಡಿ ಭಾಗದ 865 ಪ್ರದೇಶಗಳು ಕರ್ನಾಟಕಕ್ಕೆ ಸೇರಿದ್ದು ಎಂದು ಹೇಳಲಾಗಿತ್ತು. ಈ ಮಹಾಜನ್ ವರದಿಯನ್ನು ತಿರಸ್ಕರಿಸಿದ್ದ ಮಹಾರಾಷ್ಟ್ರ ಸರ್ಕಾರ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಕಳೆದ 19 ವರ್ಷಗಳಿಂದ ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದದ ಬಗ್ಗೆ ವಿಚಾರಣೆ ನಡೆಯುತ್ತಲೇ ಇದ್ದು, ನ. 23ರಂದು ಅಂತಿಮ ವಿಚಾರಣೆ ನಡೆಯಲಿದೆ.
ನವೆಂಬರ್ 23ರಂದು ಸುಪ್ರೀಂ ಕೋರ್ಟ್ನಲ್ಲಿ ಕರ್ನಾಟಕ- ಮಹಾರಾಷ್ಟ್ರದ ಗಡಿ ವಿವಾದ ತನ್ನ ವ್ಯಾಪ್ತಿಗೆ ಬರುತ್ತೋ? ಇಲ್ಲವೋ ಎಂಬ ಬಗ್ಗೆ ವಿಚಾರಣೆ ನಡೆಯಲಿದೆ. ಈ ಬಗ್ಗೆ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೋ? ಬೇಡವೋ? ಎಂಬ ಬಗ್ಗೆ ಸುಪ್ರೀಂ ಕೋರ್ಟ್ ನಿರ್ಧರಿಸಲಿದೆ. ಮಹಾಜನ್ ವರದಿ ತಿರಸ್ಕರಿಸಿದ್ದ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. 2004ರಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಮಹಾರಾಷ್ಟ್ರ ಸರ್ಕಾರ ಅರ್ಜಿ ಸಲ್ಲಿಸಿತ್ತು. ಆ ಬಗ್ಗೆ ಬುಧವಾರ ವಿಚಾರಣೆ ನಡೆಯಲಿದೆ.