ಬೆಂಗಳೂರು : ಕರ್ನಾಟಕದಲ್ಲಿ ಇನ್ನೆರಡು ದಿನಗಳ ಕಾಲ ಭಾರೀ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ದಿನಗಳಿಂದ ತುಂತುರು ಮಳೆಯಾಗುತ್ತಿದ್ದು, ಶನಿವಾರದವರೆಗೂ ಈ ಮಳೆ ಮುಂದುವರೆಯಲಿದೆ. ಹಾಗೇ, ದಿನವಿಡೀ ಮೋಡ ಕವಿದ ವಾತಾವರಣವಿರಲಿದೆ.
ಇಂದು ಮತ್ತು ನಾಳೆ ಕರ್ನಾಟಕದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಹಾಗೂ ತಮಿಳುನಾಡು ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವುದರಿಂದ ನವೆಂಬರ್ 26ರವರೆಗೆ ಕರ್ನಾಟಕದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಕರಾವಳಿಯ ಜಿಲ್ಲೆಗಳು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.