Wednesday, January 22, 2025

ರಾಜೀನಾಮೆ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು?

ಬೆಂಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಪ್ರಕರಣ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದರು. ಈ ಸಂಬಂಧ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಚಿತ್ರದುರ್ಗದ ಎಸ್.ಜೆ.ಎಂ ಹೆಲಿಪ್ಯಾಡ್​​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಅವರಿಗೆ ಮಾಡುವುದಕ್ಕೆ ಬೇರೆ ಕೆಲಸವಿಲ್ಲ. ಅದಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಖಾರವಾಗಿಯೇ ತಿರುಗೇಟು ಕೊಟ್ಟಿದ್ದಾರೆ.

59 ಪ್ರಕರಣ ಮುಚ್ಚಿ ಹಾಕಿದ ಕಾಂಗ್ರೆಸ್

ಕಾಂಗ್ರೆಸ್ ಪಕ್ಷ ಲೋಕಾಯುಕ್ತವನ್ನು ದುರ್ಬಲಗೊಳಿಸಿತ್ತು. ಅಲ್ಲದೆ, 59 ಪ್ರಕರಣಗಳನ್ನು ಮುಚ್ಚಿ ಹಾಕಿತ್ತು. ಕಾಂಗ್ರೆಸ್ ಪಕ್ಷಕ್ಕೆ ಪ್ರತಿಭಟಿಸುವ ಯಾವ ನೈತಿಕತೆ ಇದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ಮಂತ್ರಿಗಳ ಕಚೇರಿಯಲ್ಲೇ 2 ಲಕ್ಷ ರೂ. ಸಿಕ್ಕಿತ್ತು. ಸಿದ್ದರಾಮಯ್ಯ ರಾಜೀನಾಮೆ ಕೊಟ್ಟಿದ್ದರಾ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಸಾಕಪ್ಪ.. ಸಾಕು 40% ಸರ್ಕಾರ : ಸಿದ್ದರಾಮಯ್ಯ ಆಕ್ರೋಶ

ಅಂದು ಸಿದ್ದರಾಮಯ್ಯ ಅರೆಸ್ಟ್ ಆಗ್ತಿದ್ರು

ಅಂದು ಲೋಕಾಯುಕ್ತ ಇದ್ದಿದ್ದರೆ ಸಿದ್ದರಾಮಯ್ಯ ಅರೆಸ್ಟ್ ಆಗುತ್ತಿದ್ದರು. ಆದರೆ, ಲೋಕಾಯುಕ್ತ ದುರ್ಬಲಗೊಳಿಸಿದ್ದರು. ಭ್ರಷ್ಟಾಚಾರದ ವಿರುದ್ಧ ನಮ್ಮ ಸಮರ ಎನ್ನುವುದಕ್ಕೆ ಮಾಡಾಳ್ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿರುವುದೇ ಸಾಕ್ಷಿ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಪಾಪ ತೊಳೆದುಕೊಳ್ಳಲು ಸಾಧ್ಯವಿಲ್ಲ

ಸಾಕಷ್ಟು ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ತನ್ನ ಪಾಪಗಳನ್ನು ತೊಳೆದುಕೊಳ್ಳಲು ಸಾಧ್ಯ ಇಲ್ಲ. ಕಾನೂನು ತನ್ನ ಕೆಲಸ ಮಾಡುತ್ತದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ. ತಪ್ಪಿತಸ್ಥರು ಯಾರೇ ಆಗಿದ್ದರು ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES