ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಹಾಗೂ ಡಬಲ್ ಎಂಜಿನ್ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿರುಗೇಟು ಕೊಟ್ಟಿದ್ದಾರೆ.
ಬಾಗಲಕೋಟೆಯಲ್ಲಿ ವಿಜಯ ಸಂಕಲ್ಪ ಯಾತ್ರೆಯ ಸಭೆಯಲ್ಲಿ ಮಾತನಾಡಿದ ಅವರು, ತಬ್ಬಲಿಯಾಗಿರುವ ಕಾಂಗ್ರೆಸ್ ಪಕ್ಷದವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಹೇಗೆ ಸಮ? ಎಂದು ಪ್ರಶ್ನೆ ಮಾಡಿದ್ದಾರೆ.
ಭಾರತ ಭವಿಷ್ಯದಲ್ಲಿ ಕಾಂಗ್ರೆಸ್ ಮುಕ್ತವಾಗಲಿದೆ. ಮೂರು ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಸೋತು ಸುಣ್ಣವಾಗಿದೆ. ಕರ್ನಾಟಕದಲ್ಲಿ ಪಕ್ಷವನ್ನ ಸಂಘಟಿಸಿ ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡ್ತೀನಿ
ರಾಜ್ಯದಲ್ಲಿ 140 ಕ್ಕೂ ಅಧಿಕ ಸ್ಥಾನ ಗೆಲ್ಲಲು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುವೆ. ಅಧಿಕಾರದ ಕುರ್ಚಿಗಾಗಿ ಅಂಟಿಕೊಂಡ ವ್ಯಕ್ತಿಯಲ್ಲ. ಇನ್ನೊಬ್ಬರಿಗೆ ಅವಕಾಶ ನೀಡುವ ಉದ್ದೇಶದಿಂದ ನಾನು ಅಧಿಕಾರವನ್ನು ಸ್ವಯಂ ಸ್ಪೂರ್ತಿಯಿಂದ ಬಿಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಗೇ ಮತ ನೀಡ್ತಾರೆ
ಬಿಜೆಪಿ ಮೀಸಲಾತಿ ಹೆಚ್ಚಿಸಿದೆ. ಸದಾ ಸಾಮಾಜಿಕ ನ್ಯಾಯದ ಪರವಾಗಿದೆ. ಸರ್ವತೋಮುಖ ಅಭಿವೃದ್ಧಿಯೇ ಪಕ್ಷದ ಗುರಿ. ಮತದಾರರು ಬಿಜೆಪಿ ಪರ ಮತದಾನ ಮಾಡಲಿದ್ದಾರೆ ಎಂದು ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.