ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮಾರ್ಚ್ 25ರಂದು ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಈ ವೇಳೆ ರಾಜ್ಯದ ಮೂರು ಜಿಲ್ಲೆಗಳಲ್ಲಿ ಭೇಟಿ ನೀಡಿ ಸಮಾರಂಭಗಳಲ್ಲಿ ಭಾಗಿಯಾಗಲಿದ್ದಾರೆ.
ಮಾರ್ಚ್ 25 ರಂದು ಬೆಂಗಳೂರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡುತ್ತಿದ್ದು, ಬೆಣ್ಣೆನಗರಿ ದಾವಣಗೆರೆಯಲ್ಲಿ ನಡೆಯುವ ಬಿಜೆಪಿ ಮಹಾಸಂಗಮದ ಬೃಹತ್ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ. ಬಳಿಕ ಕೆ.ಆರ್.ಪುರ-ವೈಟ್‌ಫೀಲ್ಡ್ ಮೆಟ್ರೋಗೆ ಚಾಲನೆ ನೀಡಿ, ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ.
ಮೆಟ್ರೋದಲ್ಲಿ ಮೋದಿ ಪ್ರಯಾಣ
ಮಾರ್ಚ್ 25 ರ ಬೆಳಗ್ಗೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿಯವರು, ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರಕ್ಕೆ ತೆರಳಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ. ನಂತರ ವೈಟ್‌ಫೀಲ್ಡ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲು ಮಧ್ಯಾಹ್ನ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಮೋಟ್ರೋಗೆ ಚಾಲನೆ ನೀಡಿ, ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ.
ಇದನ್ನೂ ಓದಿ : ನೊಬೆಲ್ ಪ್ರಶಸ್ತಿ ರೇಸ್ ನಲ್ಲಿ ಪ್ರಧಾನಿ ಮೋದಿ?
ಬಳಿಕ ದಾವಣಗೆರೆಗೆ ತೆರಳಿ ಅಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣೆ ಮಾಡಲಿದ್ದಾರೆ. ನಂತರ ಶಿವಮೊಗ್ಗಕ್ಕೆ ತೆರಳಿ ಹೊಸ ಶಿವಮೊಗ್ಗ ವಿಮಾನ ನಿಲ್ದಾಣದಿಂದ ದೆಹಲಿಗೆ ವಿಮಾನದಲ್ಲಿ ಪ್ರಯಾಣಿಸಲಿದ್ದಾರೆ ಎಂದು ತಿಳಿದುಬಂದಿದೆ.
10 ಲಕ್ಷ ಜನ ಸೇರುವ ನಿರೀಕ್ಷೆ
ದಾವಣಗೆರೆಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಮುಕ್ತಾಯಗೊಳ್ಳಲಿದೆ. ಇಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಸುಮಾರು 10 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ರಾಜ್ಯದ ಜನರನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಲಿದ್ದಾರೆ.