ಬೆಂಗಳೂರು : ಶ್ರವಣಬೆಳಗೊಳದ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (73) ಅವರು ಅನಾರೋಗ್ಯದಿಂದ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಸ್ವಸ್ಥಿ ಶ್ರಿ ಚಾರುಕೀರ್ತಿ ಅನ್ನುವ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು ದೇಶಾದ್ಯಂತ ಅಪಾರ ಭಕ್ತವರ್ಗವನ್ನು ಹೊಂದಿದ್ದಾರೆ. ಮೇ 3, 1949ರಲ್ಲಿ ವಾರಂಗದಲ್ಲಿ ಶ್ರೀಗಳು ಜನಿಸಿದ್ದರು.
ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಕೊಡುಗೆ ನೀಡಿರುವ ಈ ಸ್ವಾಮೀಜಿಯವರು ಎಂಜಿನಿಯರಿಂಗ್, ಮೆಡಿಕಲ್ ಪದವಿಗಳಿಗೆ ಕಡಿಮೆ ಶುಲ್ಕ ಪಡೆದು ಅನೇಕರಿಗೆ ವಿದ್ಯಾದಾನ ಮಾಡಿರುವ ಕೀರ್ತಿಗೆ ಪಾತ್ರರಾಗಿದ್ದಾರೆ.
ಫಿಲಾಸಪಿಯಲ್ಲಿ ಸ್ನಾತಕೋತ್ತರ ಪದವಿ
1970ರಲ್ಲಿ ಪೀಠಾಧಿಪತಿಯಾಗಿ ನೇಮಕಗೊಂಡಿದ್ದರು. ಪ್ರಕೃತಿ, ಸಂಸ್ಕೃತಿ ಹಾಗೂ ಕನ್ನಡದಲ್ಲಿ ಜೈನ ಫಿಲಾಸಪಿ ಮಾಡಿರುವ ಇವರು, ಮೈಸೂರು ವಿಶ್ವವಿದ್ಯಾನಿಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದಿಂದ ಫಿಲಾಸಪಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ.
1/2 pic.twitter.com/ljRit1Nof1— Basavaraj S Bommai (@BSBommai) March 23, 2023
ಸಕಲ ಸರ್ಕಾರಿ ಗೌರವ ಅಂತ್ಯಸಂಸ್ಕಾರ
ಶ್ರೀಗಳ ನಿಧನದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಇಂದು ನಿಧನರಾದ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಹೇಳಿದ್ದಾರೆ.