ಬೆಂಗಳೂರು : ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ ಸಂಬಂಧ ಸಂವಿಧಾನದ 9 ನೇ ಶೆಡ್ಯೂಲ್ ನಲ್ಲಿ ಸೇರ್ಪಡೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳ ಮಾಡಲು ಜಾರಿಗೆ ತಂದಿರುವ ಕರ್ನಾಟಕ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳು ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ 2022 ನ್ನು ಸಂವಿಧಾನದ 9 ನೇ ಶೆಡ್ಯೂಲ್ ನಲ್ಲಿ ಸೇರ್ಪಡೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ. ಈ ಕಾಯ್ದೆಯನ್ವಯ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಯವರಿಗೆ ಮೀಸಲಾತಿ ಪ್ರಮಾಣ ಶೇ.15 ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ.3 ರಿಂದ ಶೇ.7ಕ್ಕೆ ಹೆಚ್ಚಿಸಲಾಗಿದೆ.
ಸಿಎಂ ಬೊಮ್ಮಾಯಿ ಸ್ಪಷ್ಟನೆ
ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆಯನ್ನು ಸಂವಿಧಾನದ 9ನೆ ಶೆಡ್ಯೂಲ್ ಗೆ ಸೇರಿಸುವ ಕುರಿತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಅವಕಾಶ ವಂಚಿತ ಸಮುದಾಯಗಳ ಕುರಿತು ನಮ್ಮ ಸರ್ಕಾರದ ಬದ್ಧತೆಗೆ ಇದು ನಿದರ್ಶನವಾಗಿದೆ ಎಂದು ತಿಳಿಸಿದ್ದಾರೆ.