ಬೆಂಗಳೂರು : ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹಾವೇರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಾಕ್ ನೀಡಿದ್ದು, ಪಕ್ಷದಿಂದ ಹೊರಬಂದಿದ್ದಾರೆ.
ಹಾವೇರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂಎಂ ಹಿರೇಮಠ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಕೇವಲ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಮಾತ್ರವಲ್ಲದೇ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ಕೂಡ ಎಂಎಂ ಹಿರೇಮಠ ರಾಜೀನಾಮೆ ಸಲ್ಲಿಸಿದ್ದಾರೆ. ಇದರ ಪ್ರತಿಯನ್ನು ಮಲ್ಲಿಕಾರ್ಜುನ್ ಖರ್ಗೆ, ಡಿಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ಗೆ ರವಾನಿಸಿದ್ದಾರೆ. ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿ ಎರಡೇ ದಿನಕ್ಕೆ ಈ ಬೆಳವಣಿಗೆ ನಡೆದಿದ್ದು, ಹಾವೇರಿಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ ಆಗುತ್ತದೆ ಎನ್ನಲಾಗುತ್ತಿದೆ.
ಡಿಕೆಶಿ ತವರು ಜಿಲ್ಲೆಯಲ್ಲೂ ಆಘಾತ
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ತವರು ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ದೊಡ್ಡ ಆಘಾತ ಎದುರಾಗಿದೆ. ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಪ್ರಸನ್ನಗೌಡ ಜೆಡಿಎಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಸಿಗುವುದು ಅನುಮಾನವಾಗಿರುವ ಹಿನ್ನೆಲೆಯಲ್ಲಿ ಪ್ರಸನ್ನಗೌಡ ಕಾಂಗ್ರೆಸ್ ಪಕ್ಷ ಬಿಡಲು ತೀರ್ಮಾನಿಸಿದ್ದಾರೆ. ಶೀಘ್ರವೇ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.