Sunday, January 19, 2025

ನಂದಿನಿ ಮೊಸರು ಪ್ಯಾಕೆಟ್ ಮೇಲೆ ‘ದಹಿ’ ಅಕ್ಷರ : ಕುಮಾರಸ್ವಾಮಿ ಸ್ಫೋಟಕ ಮಾಹಿತಿ

ಬೆಂಗಳೂರು : ನಂದಿನಿ ಪ್ರೋ ಬಯೋಟಿಕ್ ಮೊಸರು ಪ್ಯಾಕೆಟ್ ಮೇಲೆ ‘ದಹಿ’ ಎಂದು ಹಿಂದಿಯಲ್ಲಿ ಮುದ್ರಿಸಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನಂದಿನಿ ಮೇಲೆ ಹಿಂದಿಯಲ್ಲಿ  ‘ದಹಿ’ ಎಂದು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ ಕೆಎಂಎಫ್ ಗೆ ಆದೇಶಿಸಿದೆ. ಹಿಂದಿ ಹೇರಿಕೆ ಒಪ್ಪಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

ಇದು ನಂದಿನಿ ಹೈಜಾಕ್ ಮಾಡಿ ಅಮೂಲ್ ಜೊತೆ ವಿಲೀನಗೊಳಿಸುವುದರ ಆರಂಭ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕೆಎಂಎಫ್ ವಿಲೀನ ಹೇಳಿಕೆ ನೀಡಿದ್ದರು ಎಂದು ಟ್ವೀಟ್ ನಲ್ಲಿ ಕುಮಾರಸ್ವಾಮಿ ಉಲ್ಲೇಖ ಮಾಡಿದ್ದಾರೆ.

ದಮ್ಮು ತಾಕತ್ತಿನ ಪ್ರದರ್ಶನವೇ?

ಅಮಿತ್ ಶಾ ಅವರ ಹೇಳಿಕೆಯನ್ನು ಕನ್ನಡಿಗರು ಖಂಡಿಸಿದ್ದರು. ನಾನೂ ವಿರೋಧಿಸಿದ್ದೆ. ಆಮೇಲೆ ಸುಮ್ಮನಾಗಿದ್ದ ಬಿಜೆಪಿ ಸರ್ಕಾರ, ಈಗ ಆಹಾರ ಸುರಕ್ಷತಾ ಪ್ರಾಧಿಕಾರದ ಮೂಲಕ ಹಿಂಬಾಗಿಲಿನಿಂದ ಮೊಸರಿನ ಪಕ್ಕ ‘ದಹಿ’ ಸೇರಿಸಿ ಕನ್ನಡಿಗರ ಸ್ವಾಭಿಮಾನಕ್ಕೆ ಸಡ್ಡು ಹೊಡೆದಿದೆ. ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ? ಎಂದು ಪ್ರಶ್ನಿಸಿದ್ದಾರೆ.

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಶ್ರೀ ಅಮಿತ್ ಶಾ ಅವರಿಬ್ಬರೂ ಕರ್ನಾಟಕಕ್ಕೆ ಬಲು ಬಿಡುವಾಗಿ ಬಂದರು ಎಂದರೆ, ಕೇವಲ ಚುನಾವಣೆ ಉದ್ದೇಶಕ್ಕೇ ಎಂದುಕೊಂಡಿದ್ದೆ. ಆದರೆ, ಕರ್ನಾಟಕದಲ್ಲಿ ನಡೆದ ಅವರಿಬ್ಬರ ಶೋಗಳ ಸವಾರಿ ನಮ್ಮ ನಂದಿನಿಯ ಹೆಸರಿಗೇ ಕುತ್ತು ತರುತ್ತದೆ ಎಂದು ಭಾವಿಸಿರಲಿಲ್ಲ ಎಂದು ಗುಡುಗಿದ್ದಾರೆ.

ಕನ್ನಡಿಗರ ಮನೋಭಾವಕ್ಕೆ ವಿರುದ್ಧ

ಆರೂವರೆ ಕೋಟಿ ಕನ್ನಡಿಗರ ಮನೋಭಾವಕ್ಕೆ ವಿರುದ್ಧವಾಗಿ ದಹಿ ಎನ್ನುವ ಪದವನ್ನು ಮುದ್ರಿಸಿದ್ದೇ ಕೆಎಂಎಫ್ ಮಾಡಿರುವ ದೊಡ್ದ ತಪ್ಪು. ಇದು ರಾಜ್ಯ ಬಿಜೆಪಿ ಸರ್ಕಾರದ ಗಮನಕ್ಕೆ ಬಾರದೆ ಆಗಿರುವ ಕೃತ್ಯವಲ್ಲ. ಕಾಣದ ಕೈಗಳ ಕಳ್ಳಾಟ ಇಲ್ಲಿ ಸ್ಪಷ್ಟ ಎಂದು ಆರೋಪ ಮಾಡಿದ್ದಾರೆ.

RELATED ARTICLES

Related Articles

TRENDING ARTICLES