ಬೆಂಗಳೂರು : ಲಂಚ ಪ್ರಕರಣ ಸಂಬಂಧ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ 10 ದಿನಗಳ ಕಾಲ ಜೈಲುಪಾಲಾಗಿದ್ದಾರೆ.
ಹೌದು, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ. ಏಪ್ರಿಲ್ 6ರಂದು ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.
ಲೋಕಾಯುಕ್ತ ಕಸ್ಟಡಿ ಇಂದು ಅಂತ್ಯಗೊಂಡ ಹಿನ್ನೆಲೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಗುತ್ತಿಗೆದಾರನಿಂದ ಲಂಚ ಪಡೆದ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನಿರಾಕರಿಸಿದ ನಂತರ ಲೋಕಾಯುಕ್ತ ಪೊಲೀಸರು ಮಾಡಾಳ್ ಅವರನ್ನು ಬಂಧಿಸಿದ್ದರು. ನಂತರ ಅವರನ್ನು 5 ದಿನ ಲೋಕಾಯುಕ್ತ ಪೊಲೀಸರ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿತ್ತು.
ಕೆಎಸ್ ಡಿಎಲ್ (KSDL) ಟೆಂಡರ್ ಹಗರಣದ ಆರೋಪದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಪುತ್ರ ಪ್ರಶಾಂತ್ ಮಾಡಾಳು ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ದಾಳಿ ವೇಳೆ ರೆಡ್ ಹ್ಯಾಂಡ್ ಆಗಿ ಮಗ ಸಿಕ್ಕಿಬಿದ್ದಿದ್ದರು. ಅಲ್ಲದೆ 8 ಕೋಟಿಗೂ ಅಧಿಕ ನಗದು ಪತ್ತೆಯಾಗಿತ್ತು.