Monday, December 23, 2024

ರಾಜ್ಯದ ‘ಹೈನು ಉದ್ಯಮಕ್ಕೆ ಗರ’ ಬಡಿದಿದೆ : ಬಿಜೆಪಿ ವಿರುದ್ಧ ಸಿದ್ದು ಗುಡುಗು

ಬೆಂಗಳೂರು : ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಅಮುಲ್ ಐಸ್‌ಕ್ರೀಮ್ ಸೇರಿ ಹಲವು ಉತ್ಪನ್ನಗಳನ್ನು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಅಮುಲ್, ಈಗ ಹಾಲು ಮತ್ತು ಮೊಸರನ್ನು ಮಾರುಕಟ್ಟೆಗೆ ಇಳಿಸಲು ಮುಂದಾಗಿದೆ. ಈ ನಿರ್ಧಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್​ ಮಾಡಿರುವ ಸಿದ್ದರಾಮಯ್ಯ ಅವರು, ‘ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ ಎಂದಿದ್ದಾರೆ.

ಮಾರುಕಟ್ಟೆಯಲ್ಲಿ ಹಾಲು, ಮೊಸರು ಮಾಯ

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಸಚಿವ ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎನ್ನುವುದು ನಿಸ್ಸಂಶಯ ಎಂದಿದ್ದಾರೆ.

ಇದನ್ನೂ ಓದಿ : ಬಿಜೆಪಿ ಪ್ರಣಾಳಿಕೆ ‘ಸುಳ್ಳಿನ ಕಂತೆ’ ಅಲ್ಲ : ಸಚಿವ ಸುಧಾಕರ್

ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಮೊಸರು ಮಾರಾಟದ ಮೂಲಕ ಕರ್ನಾಟಕದ ಮಾರುಕಟ್ಟೆ ಪ್ರವೇಶಿಸಲು ಹಿಂದೆಯೂ ಪ್ರಯತ್ನಿಸಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ. ಈಗ ಬಿಜೆಪಿ ಕೆಂಪುಕಂಬಳಿ ಹಾಸಿ ಸ್ವಾಗತಿಸಿದೆ ಎಂದು ಕುಟುಕಿದ್ದಾರೆ.

ಕೆಎಂಎಫ್ ವಿರುದ್ಧದ ಷಡ್ಯಂತ್ರವೇ?

ಬಿಜೆಪಿ ಆಡಳಿತಾವಧಿಯಲ್ಲಿ ಕೆಎಂಎಫ್ ನಲ್ಲಿ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದು ಕೆಎಂಎಫ್ ವಿರುದ್ಧದ ಷಡ್ಯಂತ್ರವೇ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರವು ಹಾಲಿಗೆ ನೀಡುವ ಸಹಾಯಧನವನ್ನು ಲೀಟರಿಗೆ 5 ರೂ.ಗಳಷ್ಟು ಹೆಚ್ಚಿಸಿತ್ತು. ಇದರಿಂದಾಗಿ 2012-13 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು. ಈಗ ಕಡಿಮೆಯಾಗುತ್ತ ಸಾಗಲು ಕಾರಣವೇನು? ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES