ಬೆಂಗಳೂರು : ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದ್ದು, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡರು ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ.
ಹೌದು, ರಾಜ್ಯದ ಚುನಾವಣೆಯ ಪ್ರಯುಕ್ತ ನಾಳೆಯಿಂದಲೇ (ಏಪ್ರಿಲ್ 11, ಮಂಗಳವಾರ) ದೇವೇಗೌಡರು ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ. ಈ ಕುರಿತು ಸ್ವತಃ ದೇವೇಗೌಡರೇ ಮಾಹಿತಿ ನೀಡಿದ್ದಾರೆ. ಹಳೆ ಮೈಸೂರು ಭಾಗದ ಜಿಲ್ಲೆಗಳಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.
ಅನಾರೋಗ್ಯ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿದ್ದ ದೇವೇಗೌಡರು ಇದೀಗ ಚೇತರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಹಾಸನ ಟಿಕೆಟ್ ಗೊಂದಲ : ಸ್ವರೂಪ್ ಗೌಡ ಅಚ್ಚರಿಯ ಹೇಳಿಕೆ
ಕಲ್ಯಾಣ ಕರ್ನಾಟಕದಲ್ಲೂ ಪ್ರಚಾರ
ಜೆಡಿಎಸ್ ಪಕ್ಷವು ಪ್ರಬಲವಾಗಿರುವ ಹಳೆ ಮೈಸೂರು ಭಾಗದ ಮಂಡ್ಯ, ಹಾಸನ, ಕೋಲಾರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಇನ್ನು, ಉತ್ತರ ಕರ್ನಾಟಕದ ರಾಯಚೂರು, ವಿಜಯಪುರ ಜಿಲ್ಲೆಗಳಿಗೂ ಪ್ರಚಾರಕ್ಕೆ ತೆರಳಲಿದ್ದಾರೆ.
ಕಾರ್ಯಕರ್ತರು, ಅಭ್ಯರ್ಥಿಗಳಿಗೆ ಜೋಷ್
ವಿಧಾನಸಭಾ ಚುನಾವಣೆಯ ನಂತರ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಜತೆಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ದೇವೇಗೌಡರು ಸ್ಪಷ್ಟನೆ ನೀಡಿದ್ದಾರೆ. ಇನ್ನೂ ದೇವೇಗೌಡರು ನಾಳೆಯಿಂದ ಪ್ರಚಾರ ನಡೆಸುತ್ತಿರುವುದರಿಂದ ಕಾರ್ಯಕರ್ತರು ಹಾಗೂ ಜೆಡಿಎಸ್ ಅಭ್ಯರ್ಥಿಗಳಿಗೆ ಹೊಸ ಜೋಷ್ ಬಂದಂತಾಗಿದೆ.