ಬೆಂಗಳೂರು : ಹಾಸನದಲ್ಲಿ ಜೆಡಿಎಸ್ ಟಿಕೆಟ್ ಕಗ್ಗಂಟು ಬಗೆಹರಿದಿಲ್ಲ. ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಡುತ್ತೇನೆಂದು ಹೇಳಿದ್ದಾರೆ.
ಹೌದು, ಕುಮಾರಸ್ವಾಮಿ ತಮ್ಮ ಹಠ ಬಿಡುತ್ತಿಲ್ಲ. ಇತ್ತ ಮಾಜಿ ಸಚಿವ ಎಚ್.ಡಿ ರೇವಣ್ಣ ದಂಪತಿ ಟಿಕೆಟ್ಗಾಗಿ ಲಾಬಿ ನಡೆಸುತ್ತಿದ್ದಾರೆ. ದೇವೇಗೌಡರ ಜೊತೆ ಹಲವು ಸುತ್ತಿನ ಮಾತುಕತೆ ನಡೆದರೂ ಇನ್ನೂ ಹಾಸನ ಟಿಕೆಟ್ ಗೊಂದಲಕ್ಕೆ ತೆರೆ ಬಿದ್ದಿಲ್ಲ.
ಈ ನಡುವೆ ಟಿಕೆಟ್ ಆಕಾಂಕ್ಷಿ ಸ್ವರೂಪ್ ಗೌಡ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಹಾಸನ ಟಿಕೆಟ್ ಯಾರಿಗೆ ಸಿಕ್ಕರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳುವ ಮೂಲಕ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ.
ಎರಡನೇ ಪಟ್ಟಿಯಲ್ಲಿ ಹಾಸನ ಅಭ್ಯರ್ಥಿ ಹೆಸರು ಬಿಡುಗಡೆ ಮಾಡಲಾಗುತ್ತದೆ. ಹಾಸನದಲ್ಲಿ ಈ ಬಾರಿ ಜೆಡಿಎಸ್ ಗೆಲುವು ಸಾಧಿಸುತ್ತದೆ. ನೂರಕ್ಕೆ ನೂರು ಭಾಗ ಜೆಡಿಎಸ್ ಗೆಲ್ಲುವುದರಲ್ಲಿ ಅನುಮಾನವೇ ಇಲ್ಲ ಎಂದಿದ್ದಾರೆ.
ಇದನ್ನೂ ಓದಿ : ‘ಕಾಂಗ್ರೆಸ್ ಗೆ ಸೇರಿದ್ದು ತಪ್ಪಾಯ್ತು’ ಎಂದು ದತ್ತಾ ಬೇಸರ
ಸಾಮಾನ್ಯ ಕಾರ್ಯಕರ್ತರಿಗೇ ಟಿಕೆಟ್
ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರಿಗೇ ಟಿಕೆಟ್ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಆಗಿ ಹೇಳಿದ್ದಾರೆ. ಸ್ವರೂಪ್‌ಗೌಡಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಎಚ್.ಡಿ. ಕುಮಾರಸ್ವಾಮಿ, ಕಾರ್ಯಕರ್ತರ ಅಭಿಪ್ರಾಯವೇ ನಮ್ಮ ಅಭಿಪ್ರಾಯ. ಕಾರ್ಯಕರ್ತನಿಗೇ ಟಿಕೆಟ್ ಕೊಡುವುದಾಗಿ ಈಗಾಗಲೇ ತೀರ್ಮಾನ ಮಾಡಿಯಾಗಿದೆ. ಶೀಘ್ರದಲ್ಲಿಯೇ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.