ಬೆಂಗಳೂರು : ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ ಹಾಗೂ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ತಮ್ಮ ಸುಧೀರ್ಘ ಚುನಾವಣಾ ರಾಜಕೀಯಕ್ಕೆ ಅಧೀಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ.
ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಕೆ.ಎಸ್ ಈಶ್ವರಪ್ಪ ಅವರು ಪತ್ರ ಬರೆದಿದ್ದಾರೆ. ‘ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು’ ಎಂದು ಮನವಿ ಮಾಡಿದ್ದಾರೆ.
‘ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ ಮುಖ್ಯಮಂತ್ರಿಯವರೆಗೆ ಗೌರವ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದಗಳು’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ : ಮಹಾ ಎಡವಟ್ಟು : ಕಾಂಗ್ರೆಸ್ ಅಭ್ಯರ್ಥಿ ವಿವಾದಾತ್ಮಕ ಹೇಳಿಕೆ
ಚುನಾವಣೆಗೆ ನನ್ನನ್ನು ಅಭ್ಯರ್ಥಿಯನ್ನಾಗಿ ಪರಿಗಣಿಸಬೇಡಿ
‘ನನಗೆ ಯಾವುದೇ ಕ್ಷೇತ್ರದ ಟಿಕೆಟ್ ನೀಡಬೇಡಿ. ನನಗೆ ಯಾವ ಒತ್ತಡವೂ ಇಲ್ಲ. 40 ವರ್ಷಗಳ ರಾಜಕೀಯ ಜೀವನವನ್ನು ಸಂತೋಷದಿಂದ ಕಳೆದಿದ್ದೇನೆ. ಈ ಬಾರಿಯ ಚುನಾವಣೆಗೆ ನನ್ನನ್ನು ಅಭ್ಯರ್ಥಿಯನ್ನಾಗಿ ಪರಿಗಣಿಸಬೇಡಿ’ ಎಂದು ಮನವಿ ಮಾಡಿದ್ದಾರೆ.
ಒಟ್ನಲ್ಲಿ, ಶಿವಮೊಗ್ಗ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಎಸ್ ಈಶ್ವರಪ್ಪ ಧಿಡೀರ್ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ತಮ್ಮ ಮಗ ಕೆ.ಇ ಕಾಂತೇಶ್ ಅವರಿಗೆ ಈಶ್ವರಪ್ಪ ಟಿಕೆಟ್ ನೀಡುವಂತೆ ವರಿಷ್ಠರಿಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಳಿಕ ಈಶ್ವರಪ್ಪ ಪುತ್ರನ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.