ಬೆಂಗಳೂರು : ಹಾಸನ ಜೆಡಿಎಸ್ ಟಿಕೆಟ್ ಗೊಂದಲ ವಿಚಾರವಾಗಿ ಮಾತನಾಡಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ, ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೇ ನೀಡಿದರೂ ನಾವು ಬದ್ಧ ಎಂದು ತಿಳಿಸಿದ್ದಾರೆ.
ಹೊಳೆನರಸೀಪುರದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿರುವ ಅವರು, ಹಾಸನ ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಯಾವ ರೀತಿಯ ನಿರ್ಧಾರವನ್ನು ಕೈಗೊಳ್ಳುತ್ತಾರೋ ಅದಕ್ಕೆ ನಾವು ಬದ್ಧ. ಅವರ ನಿರ್ಧಾರವೇ ಅಂತಿಮ ಎಂದು ಹೇಳಿದ್ದಾರೆ.
ಹಾಸನ ಕ್ಷೇತ್ರದ ಟಿಕೆಟ್ ಗಾಗಿ ಪತ್ನಿ ಭವಾನಿ ರೇವಣ್ಣ ಬೇಡಿಕೆ ಇಟ್ಟಿದ್ದು, ಮಾಜಿ ಶಾಸಕ ಪ್ರಕಾಶ್ ಅವರ ಪುತ್ರ ಸ್ವರೂಪ್ ಕೂಡ ಭಾರೀ ಲಾಬಿ ನಡೆಸುತ್ತಿದ್ದಾರೆ. ಇತ್ತ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಶತಾಯಗತಾಯ ಭವಾನಿಗೆ ಟಿಕೆಟ್ ನೀಡಬಾರದು ಎಂದು ಹಠಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಎರಡು ಬಾರಿ ಹೃದಯ ಚಿಕಿತ್ಸೆ ಮಾಡಿಸಿಕೊಂಡರೂ, ನಿಮಗಾಗಿ ಯೋಚನೆ ಮಾಡ್ತಿದ್ದೀನಿ : ಕುಮಾರಸ್ವಾಮಿ
ಏ.17ಕ್ಕೆ ನಾಮಪತ್ರ ಸಲ್ಲಿಸುವೆ
ಏಪ್ರಿಲ್ 17ರಂದು ನಾನು ನಾಮಪತ್ರ ಸಲ್ಲಿಸುತ್ತೇನೆ ಎಂದು ಇದೇ ವೇಳೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಘೋಷಿಸಿದ್ದಾರೆ. ಅಲ್ಲದೆ, ಹೆಚ್ಚಿನ ಸಂಖ್ಯೆಯಲ್ಲಿ ನೀವೆಲ್ಲಾ ಬರಬೇಕು ಎಂದು ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
ಏಳೂ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವು
ಹುಣಸೆ ಬೀಜ ಆಯುತ್ತಿದ್ದವರನ್ನು ನಗರಸಭಾ ಸದಸ್ಯರನ್ನಾಗಿ ಮಾಡಿದ್ದೆ. ನಮ್ಮ ಪಕ್ಷದಲ್ಲೇ ಇದ್ದು ತಿಂದು, ತೇಗಿದವರು ಇಂದು ಪಕ್ಷದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಇನ್ನು ಒಂದು ತಿಂಗಳು ಅಂತಹ ವದಂತಿಗಳಿಗೆ ಯಾರೂ ಕಿವಿಗೊಡಬೇಡಿ. ದೇವೇಗೌಡರ ಜೊತೆ ಮಾಜಿ ಸಚಿವ ಎ.ಮಂಜು ಸೇರಿದ್ದಾರೆ. ಜಿಲ್ಲೆಯ ಏಳೂ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದಿದ್ದಾರೆ.