ಬೆಂಗಳೂರು : ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ಮೀಸಲಾತಿ ರದ್ದುಪಡಿಗೊಳಿಸಿರುವ ಬಿಜೆಪಿ ಸರ್ಕಾರದ ಕ್ರಮಕ್ಕೆ ಭಾರೀ ಹಿನ್ನಡೆಯಾಗಿದೆ.
ಹೌದು, ರಾಜ್ಯದಲ್ಲಿ ಮುಸ್ಲಿಮರಿಗೆ ನೀಡಿರುವ ಮೀಸಲಾತಿ ರದ್ದುಪಡಿಸಿರುವ ರಾಜ್ಯ ಸರ್ಕಾರದ ಕ್ರಮ ‘ತಪ್ಪಾದ ಗ್ರಹಿಕೆ’ ಕ್ರಮ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇ.4 ಮೀಸಲಾತಿ ರದ್ದುಪಡಿಸಲಾಗಿತ್ತು. ಆ ಮೀಸಲಾತಿಯನ್ನು ಒಕ್ಕಲಿಗ ಮತ್ತು ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ನೀಡಿತ್ತು.
ಇದನ್ನೂ ಓದಿ : ಸಿಇಟಿ ಅರ್ಜಿಯಲ್ಲಿ ಮಾಹಿತಿ ತಿದ್ದುಪಡಿಗೆ 15ರವರೆಗೆ ಅವಕಾಶ
ರಾಜ್ಯದಲ್ಲಿ ಮುಸ್ಲಿಂಮರಿಗೆ ಪ್ರವರ್ಗ 2ಡಿ ಅಡಿಯಲ್ಲಿ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದುಪಡಿಸಿರುವ ರಾಜ್ಯ ಬಿಜೆಪಿ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿ ನೀಡಿತ್ತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್ ನರಸಿಂಹ, ಜೆ.ಪಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ಹಿರಿಯ ವಕೀಲ ಕಪಿಲ್ ಸಿಬಲ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸಮ್ಮತಿಸಿತ್ತು.
ಲಿಂಗಾಯತ, ಒಕ್ಕಲಿಗರಿಗೆ ಶೇ.2 ಮೀಸಲಾತಿ
ರಾಜ್ಯ ಸರ್ಕಾರ 2ಸಿ, 2ಡಿ ಹೊಸ ಪ್ರವರ್ಗ ಸೃಷ್ಟಿಗೆ ಮುಂದಾಗಿತ್ತು. ಅದಕ್ಕಾಗಿ ಮುಸ್ಲಿಂ ಸಮುದಾಯಕ್ಕೆ 2ಬಿ ಅಡಿಯಲ್ಲಿ ನೀಡಲಾಗುತ್ತಿದ್ದ ಶೇ.4ರ ಮೀಸಲಾತಿ ರದ್ದುಗೊಳಿಸಿದೆ. ಇದಕ್ಕೆ ಪ್ರತಿಯಾಗಿ ಮುಸ್ಲಿಂ ಸಮುದಾಯವನ್ನು ಆರ್ಥಿಕವಾಗಿ ಹಿಂದುಳಿದ ವರ್ಗದ (EWS) ಅಡಿ ಪರಿಗಣಿಸಲು ನಿರ್ಧರಿಸಿತ್ತು. ಬಳಿಕ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ತಲಾ ಶೇ.2ರ ಮೀಸಲಾತಿ ನೀಡುವ ಬಗ್ಗೆ ತೀರ್ಮಾನ ಕೈಗೊಂಡಿತ್ತು. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ, ಹಿರಿಯ ವಕೀಲ ಕಪಿಲ್ ಸಿಬಲ್ ಸುಪ್ರಿಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.