ಬೆಂಗಳೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಆದಿಚುಂಚನಗಿರಿ ಮಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ನಿಶ್ಯಕ್ತಿ ಮತ್ತು ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಳ್ಳುತ್ತಿರುವ ಕಾರಣ ಎಚ್.ಡಿ ಕುಮಾರಸ್ವಾಮಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಅವರು ಇದೀಗ ಚೇತರಿಸಿಕೊಂಡಿದ್ದಾರೆ.
ಪಕ್ಷ ಸಂಘಟನೆಗೆ ರಾಜ್ಯ ಪ್ರವಾಸ
ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ಕುಮಾರಸ್ವಾಮಿ ರಾಜ್ಯ ಪ್ರವಾಸ ಕೈಗೊಂಡಿದ್ದರು. ಎಲ್ಲಾ ಜಿಲ್ಲೆಗಳಲ್ಲೂ ಪ್ರವಾಸ ಮಾಡಿದ್ದ ಅವರು, ಪಕ್ಷ ಸಂಘಟಿಸಲು ಹಗಲಿರುಳು ದಣಿವರಿಯದೆ ದುಡಿದಿದ್ದರು. ನಿನ್ನೆ (ಶನಿವಾರ) ಆರೋಗ್ಯದಲ್ಲಿ ಏರುಪೇರಾದ ಕಾರಣ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ, ಆದಿಚುಂಚನಗಿರಿ ಶ್ರೀಗಳು ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ್ದಾರೆ.
ಇದನ್ನೂ ಓದಿ : ಹೆಚ್ ಡಿ ಕುಮಾರಸ್ವಾಮಿಯ ಎಲ್ಲಾ ಕಾರ್ಯಕ್ರಮಗಳು ರದ್ದು
ಆರೋಗ್ಯ ಸುಧಾರಣೆ ಬಳಿಕ ಪ್ರಚಾರ
ಅನಾರೋಗ್ಯದ ನಡುವೆಯೂ ಎಚ್.ಡಿ ಕುಮಾರಸ್ವಾಮಿ ಅವರು ಇಂದು ಚುನಾವಣೆಗೆ ಪ್ಲ್ಯಾನ್ ಮಾಡುತ್ತಿದ್ದಾರೆ. ಜೆಡಿಎಸ್ ನಾಯಕರೊಂದಿಗೆ ರೋಡ್ ಮ್ಯಾಪ್ ಕುರಿತು ಚರ್ಚೆ ಮಾಡಿದ್ದಾರೆ. ಏಪ್ರಿಲ್ 28ರವರೆಗೆ ಬೆಂಗಳೂರು-ಮೈಸೂರಿನಲ್ಲಿ ಪ್ರಚಾರ ಹಮ್ಮಿಕೊಳ್ಳಲಾಗಿದ್ದು, ಆರೋಗ್ಯ ಸಂಪೂರ್ಣ ಸುಧಾರಣೆ ಆದ ಬಳಿಕ ಉಳಿದ ಭಾಗದಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.