ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಗೆಲುವಿನ ಓಟ ಮುಂದುವರೆಸುತ್ತಿದೆ.
ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದು, ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಅವರು, ಕರ್ನಾಟಕದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. ಕಾರ್ಯಕರ್ತರು ಮತ್ತು ಕಾಂಗ್ರೆಸ್ ನಾಯಕರ ಶ್ರಮದಿಂದ ಗೆಲುವು ಸಾಧಿಸುತ್ತಿರುವುದಾಗಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇನ್ನೂ ತಾವು ಜೈಲಿನಲ್ಲಿದ್ದ ದಿನಗಳನ್ನು ನೆನೆದು ಭಾವುಕರಾಗಿದ್ದಾರೆ.
ರೊಚ್ಚಿಗೆದ್ದು ಕಾಂಗ್ರೆಸ್ ಗೆಲ್ಲಿಸಿದ್ದಾರೆ
ಜನರು ಬಿಜೆಪಿ ವಿರುದ್ಧ ರೊಚ್ಚಿಗೆದ್ದು ಕಾಂಗ್ರೆಸ್ ಗೆಲ್ಲಿಸಿದ್ದಾರೆ. ಇದು ಜನರ ಗೆಲುವು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಬಂದಿದೆ. ನಾವು ಸುಲಭವಾಗಿ ಸರ್ಕಾರ ಮಾಡುತ್ತೇವೆ. ಇಂದು ಸಂಜೆ ಗೆದ್ದಿರುವ ಅಭ್ಯರ್ಥಿಗಳನ್ನು ಬೆಂಗಳೂರಿಗೆ ಬರಲು ಸೂಚನೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಗೆದ್ದಿರುವ ಅಭ್ಯರ್ಥಿಗಳು ಮುಂದೆ ಒಳ್ಳೆಯ ಕೆಲಸ ಮಾಡಲಿ, ಸರ್ಕಾರ ರಚನೆ ಮಾಡುವ ಕುರಿತು ಹೈಕಮಾಂಡ್‌ನ ನಾಯಕರು ನಿರ್ಧಾರ ಮಾಡಲಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.
ಮಾಧುಸ್ವಾಮಿಗೆ ಸೋಲು
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಸೋತಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸುರೇಶ್ ಬಾಬು ಅವರಿಗೆ ಜಯವಾಗಿದೆ.