Thursday, May 2, 2024

ನಾವು ಮತ್ತೆ ‘ರಾಜ್ಯದಲ್ಲಿ ಪುಟಿದೇಳುತ್ತೇವೆ’ : ಬಸವರಾಜ ಬೊಮ್ಮಾಯಿ

ಬೆಂಗಳೂರು : ನಾವು ಮತ್ತೆ ರಾಜ್ಯದಲ್ಲಿ ಪುಟಿದೇಳುತ್ತೇವೆ. ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಫಲಿತಾಂಶದ ಆರು ದಿನಗಳ ಬಳಿಕ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ.‌ ಶಿವಕುಮಾರ್ ಆಯ್ಕೆ ಆಗಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಪ್ರಜಾಪ್ರಭುತ್ವದ ತೀರ್ಪು ಒಪ್ಪಿಕೊಳ್ಳಬೇಕಾಗುತ್ತದೆ ಎಂದಿದ್ದಾರೆ.

ನಮ್ಮ ಸೋಲಿನ ಪರಾಮರ್ಶೆ ಬೇರೆ ಬೇರೆ ಹಂತದಲ್ಲಿ ನಡೆಯುತ್ತಿದೆ. ಎರಡ್ಮೂರು ದಿನಗಳಲ್ಲಿ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಸಭೆ ಮಾಡುತ್ತೇವೆ. ಅದೇ ಸಭೆಯಲ್ಲಿ ವಿಪಕ್ಷ ನಾಯಕರ ತೀರ್ಮಾನ ಮಾಡುತ್ತೇವೆ ಎಂದು ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ನೂತನ ‘ಸಿಎಂ ಸಿದ್ದು’ಗೆ ಬೊಮ್ಮಾಯಿ ಅಭಿನಂದನೆ

ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇಲ್ಲ

ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇಲ್ಲ. ಕೆಲವು ಕ್ಷೇತ್ರಗಳಲ್ಲಿ ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸುವಲ್ಲಿ ನಾವು ಹಿಂದೆ ಬಿದ್ದಿದ್ದು, ಚುನಾವಣಾ ತಯಾರಿಯಲ್ಲಿ ಕಾಂಗ್ರೆಸ್ ಮುಂದೆ ಇದ್ದಿದ್ದು ಸೋಲಿಗೆ ಕಾರಣವಾಗಿದೆ. ನಾವು ಆತ್ಮ ಸ್ಥೈರ್ಯ ಕಳೆದುಕೊಂಡಿಲ್ಲ ಎಂದು ಹೇಳಿದ್ದಾರೆ.

ಅನ್ಯಾಯ ಆದ್ರೆ ಸರ್ಕಾರಕ್ಕೆ ಎಚ್ಚರಿಸುತ್ತೇವೆ

ವಿಪಕ್ಷವಾಗಿ ನಾವು ಜವಾಬ್ದಾರಿಯಿಂದ ಕೆಲಸ ಮಾಡುವ ಅವಶ್ಯಕತೆ ಇದೆ. ನೆಲ-ಜಲ ವಿಚಾರದಲ್ಲಿ ರಾಜಕೀಯ ಬೆರೆಸದೇ ಕೆಲಸ ಮಾಡಬೇಕು. ಜನರಿಗೆ ಅನ್ಯಾಯ ಆದಾಗ ಸರ್ಕಾರಕ್ಕೆ ಎಚ್ಚರಿಕೆ ಕೊಡುವ ಕೆಲಸ ಮಾಡುತ್ತೇವೆ. 2023 ರಾಜ್ಯದ ಒಟ್ಟಾರೆ ಅಭಿವೃದ್ಧಿ ದೃಷ್ಟಿಯಿಂದ ಬಹಳ ಮಹತ್ವದ್ದು ಮತ್ತು ಸವಾಲುಗಳಿವೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಸುಭಿಕ್ಷವಾಗಿರುವ ನಾಡು. ಜನ ಶಾಂತಿಯನ್ನು ಮಾನ್ಯ ಮಾಡುವಂತಹವರು. ಕರ್ನಾಟಕದ ಅಭ್ಯುದಯ ದೇಶಕ್ಕೆ ಪರಿಣಾಮ ಬೀರುತ್ತದೆ. ಈ ಆಯಾಮಗಳ ಮೇಲೆ ವಿಪಕ್ಷವಾಗಿ ನಾವು ಇರುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

RELATED ARTICLES

Related Articles

TRENDING ARTICLES