ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ 9 ವರ್ಷಗಳಲ್ಲಿ ದೇಶದ ಮೇಲೆ 155 ಲಕ್ಷ ಕೋಟಿ ರೂಪಾಯಿ ಸಾಲ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದರು.
ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳ ಘೋಷಣೆಗೆ ಸಂಬಂಧಿಸಿದಂತೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕೇಂದ್ರ ಬಿಜೆಪಿ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಈ ದೇಶದ ಸಾಲ 53 ಲಕ್ಷದ 11 ಸಾವಿರ ಕೋಟಿ ಇತ್ತು. ಮೋದಿ ಅಧಿಕಾರಕ್ಕೆ ಬಂದ ನಂತರ 9 ವರ್ಷಗಳಲ್ಲಿ ದೇಶದ ಮೇಲೆ 155 ಲಕ್ಷ ಕೋಟಿ ಆಗಿದೆ ಎಂದು ಕೇಂದ್ರದ ಮೇಲೆ ಗೂಬೆ ಕೂರಿಸಿದರು.
ಇದನ್ನೂ ಓದಿ : ನೋಟು ಬ್ಯಾನ್ : ಪ್ರಧಾನಿ ಮೋದಿಗೆ ಟಕ್ಕರ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ
ಕರ್ನಾಟಕ ಆರ್ಥಿಕ ದಿವಾಳಿ
ಬಸವರಾಜ ಬೊಮ್ಮಾಯಿ, ಬಿ.ಎಸ್ ಯಡಿಯೂರಪ್ಪ ಸರ್ಕಾರದಲ್ಲಿ 4 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ನಾನು ಐದು ವರ್ಷಗಳ ಕಾಲ ಸರ್ಕಾರ ನಡೆಸಿದಾಗಲೂ ಇಷ್ಟೊಂದು ಸಾಲ ಮಾಡಿರಲಿಲ್ಲ. ಹೀಗಾಗಿ ನಾವು ಕರ್ನಾಟಕವನ್ನು ಆರ್ಥಿಕ ದಿವಾಳಿಗೆ ಸಿಲುಕಿಸದೆ ನಾವು ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.
ನ್ಯಾಯಯುತವಾಗಿ ಕರ್ನಾಟಕಕ್ಕೆ ಸಿಗಬೇಕಿದ್ದ 5495 ಕೋಟಿ ರೂಪಾಯಿ ಅನ್ನು ಬಿಜೆಪಿ ರಾಜ್ಯ ಸರ್ಕಾರ ಕೇಳಿಲ್ಲ. ರಾಜ್ಯದ ಸಂಸದರು ಕೇಳಿಲ್ಲ. ಪ್ರಹ್ಲಾದ್ ಜೋಶಿ ಈ ಬಗ್ಗೆ ಮಾತೇ ಆಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿಯುದ್ದಕ್ಕೂ ಬಿಜೆಪಿ ಸರ್ಕಾರದ ಮೇಲೆ ಆರೋಪ ಮಾಡಿದರು.