Wednesday, May 14, 2025

ಉಚಿತ ಗ್ಯಾರಂಟಿಗಳ ಅನುಷ್ಠಾನಕ್ಕೆ ತಾತ್ವಿಕ ಆದೇಶ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಕಾಂಗ್ರೆಸ್ ಪಕ್ಷದ ಐದು ಉಚಿತ ಗ್ಯಾರಂಟಿಗಳನ್ನು ಜಾರಿಗೆ ತರಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ತಾತ್ವಿಕ ಆದೇಶ ಹೊರಡಿಸಿದೆ.

ಈ ಐದು ಯೋಜನೆಗಳ ಷರತ್ತುಗಳು, ನಿಬಂಧನೆಗಳು, ನಿಯಮಗಳ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಅಧಿಕೃತವಾಗಿ ಜಾರಿಗೊಳಿಸಲಾಗುತ್ತದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚುನಾವಣಾ ಪೂರ್ವದಲ್ಲಿ ನಾವು ರಾಜ್ಯದ ಜನರಿಗೆ 5 ಪ್ರಮುಖ ಗ್ಯಾರಂಟಿಗಳನ್ನು ನೀಡಿದ್ದೆವು. ಜನತೆ ನಮ್ಮ ಮೇಲೆ ನಂಬಿಕೆಯಿಟ್ಟು ಪಕ್ಷಕ್ಕೆ ಪೂರ್ಣ ಬಹುಮತ ನೀಡಿದ್ದರಿಂದ ಇಂದು ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ ಎಂದಿದ್ದಾರೆ.

ನಮ್ಮ ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿಯೇ ಐದೂ ಗ್ಯಾರಂಟಿಗಳಿಗೆ ಅನುಮೋದನೆ ನೀಡುವ ವಚನ ನೀಡಿದ್ದೆ. ಇಂದು ಕೊಟ್ಟ ಮಾತಿನಂತೆ ಪ್ರಥಮ ಸಂಪುಟ ಸಭೆಯಲ್ಲೇ ನಮ್ಮ ಎಲ್ಲಾ ಗ್ಯಾರೆಂಟಿಗಳಿಗೆ ತಾತ್ವಿಕ ಅನುಮೋದನೆ ನೀಡಿ ಮತ್ತೊಮ್ಮೆ ನುಡಿದಂತೆ ನಡೆದಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ : ಉಚಿತ ಗ್ಯಾರಂಟಿ : ‘ಕೇಂದ್ರ ಸರ್ಕಾರದ ಕಡೆ ಬೊಟ್ಟು’ ಮಾಡಿದ ಸಿಎಂ ಸಿದ್ದರಾಮಯ್ಯ

ಸಮಸ್ತ ಕನ್ನಡಿಗರ ಪ್ರೀತಿ, ನಂಬಿಕೆಗೆ ನಾನು ಆಭಾರಿ. ಸದೃಢ, ಸಮೃದ್ಧ, ಸೌಹಾರ್ದ ಕರ್ನಾಟಕದ  ಮರುನಿರ್ಮಾಣಕ್ಕಾಗಿ ನಾವೆಲ್ಲರೂ ಜೊತೆಗೂಡಿ ಶ್ರಮಿಸೋಣ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

5 ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ

ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಬಡಕುಟುಂಬದ ಪ್ರತಿ ವ್ಯಕ್ತಿಗೆ ಮಾಸಿಕ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಲಾಗಿದೆ.

ಗೃಹಜ್ಯೋತಿ ಯೋಜನೆಯಡಿ ರಾಜ್ಯದ ಪ್ರತಿ ಮನೆಗೆ ತಿಂಗಳಿಗೆ 200 ಯುನಿಟ್ ವಿದ್ಯುತ್ತನ್ನು ಉಚಿತವಾಗಿ ನೀಡುವುದು. ರಾಜ್ಯದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲು, ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿಗೆ ಪ್ರತೀ ತಿಂಗಳು ರೂ. 2,000 ಸಹಾಯಧನ ಒದಗಿಸುವುದು. ಗ್ಯಾರಂಟಿಯಾದ ಯುವನಿಧಿ ಯೋಜನೆಯಡಿ ಪ್ರಸಕ್ತ ಸಾಲಿನಿಂದ ಎಲ್ಲಾ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ರೂ. 3,000 ಹಾಗೂ ಡಿಪ್ಲೊಮಾ ಪದವೀಧರ ನಿರುದ್ಯೋಗಿಗಳಿಗೆ ರೂ. 1,500 ನಿರುದ್ಯೋಗ ಭತ್ಯೆ ನೀಡಲು ತಾತ್ವಿಕ ಅನುಮೋದನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

RELATED ARTICLES

Related Articles

TRENDING ARTICLES