Monday, December 23, 2024

ಇನ್ಮೇಲೆ ‘ಕೆಂಪಣ್ಣ 40% ಕಮ್ಮಿಗೆ ಟೆಂಡರ್’ ಹಾಕುವಂತೆ ಹೇಳಬೇಕು : ಬೊಮ್ಮಾಯಿ

ಬೆಂಗಳೂರು : ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮೇಲೆ ಬಹಳ ದೊಡ್ಡ ಜವಾಬ್ದಾರಿ ಇದೆ. ಇನ್ಮೇಲೆ ಕೆಂಪಣ್ಣ ತಮ್ಮೆಲ್ಲ ಸಂಘದವರಿಗೂ 40% ಕಮ್ಮಿಗೆ ಟೆಂಡರ್ ಹಾಕುವಂತೆ ಹೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಂಪಣ್ಣ ಇದುವರೆಗೆ 40% ದಾಖಲೆ ಕೊಡ್ಲಿಲ್ಲ, ಕೋರ್ಟ್‌ಗೂ ಕೊಡ್ಲಿಲ್ಲ. ನಮ್ಮ ವಿರುದ್ಧ ಅಪಪ್ರಚಾರ ಮಾಡಿದರು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ನವರು ಅದರ ಲಾಭ ತೆಗೆದುಕೊಂಡಿದ್ದಾರೆ. ನಮ್ಮ ಕಾಲದ, ಅವರ ಕಾಲದ ಎಲ್ಲವನ್ನೂ ತನಿಖೆ ಮಾಡಲಿ. ಅದರ ಜೊತೆಗೆ ಪಿಎಸ್ಐ ಪ್ರಕರಣವನ್ನೂ ತನಿಖೆ ಮಾಡಲಿ. ಎಲ್ಲ ಪ್ರಕರಣಗಳ ಸತ್ಯ ಹೊರಗೆ ಬರಲಿ. ನಾವು ಅವರ ಕಾಲದ ಹಗರಣಗಳನ್ನು ಲೋಕಾಯುಕ್ತಕ್ಕೆ ಕೊಟ್ಟಿದೀವಿ ಎಂದು ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ‘ಕಾರ್ಯಕರ್ತರಿಗೆ ಒಳ್ಳೆಯದಾಗಲಿ’ : ಯಡಿಯೂರಪ್ಪ

ಈಗ ಅವರದೇ ಸರ್ಕಾರ ಬಂದಿದೆ

ಗುತ್ತಿಗೆದಾರರ ಸಂಘದವರೂ 40% ಕಮೀಷನ್ ಆರೋಪ ಮಾಡಿದ್ದರು. ಈಗ ಅವರ ಸರ್ಕಾರ ಬಂದಿದೆ. 40% ಇಲ್ಲ ಅಂತ ಹೇಳಬಹುದು. ಗುತ್ತಿಗೆದಾರ ಸಂಘದವರು ಇನ್ನು ಮುಂದಿನ ಎಲ್ಲ ಟೆಂಡರ್‌ಗಳಲ್ಲೂ 40% ಕಡಿಮೆ ಹಾಕಲಿ. ಅಂದರೆ ಮಾತ್ರ ನಮ್ಮ ಕಾಲದಲ್ಲಿ 40% ಇತ್ತು ಅಂತ ಆಗುತ್ತದೆ. ಇವತ್ತು ಅಷ್ಟೇ ಮೊತ್ತಕ್ಕೆ ಟೆಂಡರ್ ಹಾಕಿದರೆ, 40% ಈಗಲೂ ಇದೆ ಅಂತ ಆಗುತ್ತದೆ ಎಂದಿದ್ದಾರೆ.

ಸಾಕ್ಷಿ ಸಮೇತ ತೋರಿಸಬೇಕು

ಬಿಜೆಪಿ ಅವಧಿಯ ಹಗರಣಗಳ ತನಿಖೆ ಮಾಡುತ್ತೇವೆ ಎಂದಿರುವ ಕಾಂಗ್ರೆಸ್ ಗೆ, ನಾನು ಸ್ಪಷ್ಟವಾಗಿ ಹೇಳುತ್ತಿದ್ದೇ‌ನೆ. ದಯವಿಟ್ಟು ಎಲ್ಲ ತನಿಖೆ ಮಾಡಲಿ. 40% ಕಮಿಷನ್ ಆರೋಪವನ್ನು ನಮ್ಮ ಮೇಲೆ ಅವರು ಹೊರೆಸಿದ್ದಾರೆ. 40% ಆಗಿದೆ ಅಂತ ಅವರು ಪುರಾವೆ ಸಮೇತ ತೋರಿಸಬೇಕು ಎಂದು ಬೊಮ್ಮಾಯಿ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ 40% ಆರೋಪ ಕುರಿತ ಎಲ್ಲ ದಾಖಲೆ ಕೊಡಲಿ. ನಾವು 40% ಕಮಿಷನ್ ತೆಗೆದುಕೊಂಡಿದ್ದೇವೆ  ಎಂಬುದನ್ನು ದಾಖಲೆ ಸಹಿತ ತೋರಿಸಲಿ. ಈ ಸಂಬಂಧ ನಾನು ಕೂಡ ಆಗ್ರಹ ಮಾಡುತ್ತೇನೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES