ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ರಾಜ್ಯದ 4 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಜೂನ್ 4 ರಂದು ನೈಋತ್ಯ ಮಾನ್ಸೂನ್ ಕೇರಳ ಪ್ರವೇಶಸಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಇನ್ನೂ ದಕ್ಷಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರಲ್ಲಿ ಇಂದು(ಶುಕ್ರವಾರ) ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು ಯಾವುದೇ ಸಂದರ್ಭದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆ ಬೆಂಗಳೂರಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.