Wednesday, January 22, 2025

ರೈಲು ಅಪಘಾತ : ಪ್ರಧಾನಿ ಮೋದಿ ಸಂತಾಪ, ಸಂತ್ರಸ್ತರಿಗೆ ಎಲ್ಲಾ ರೀತಿಯ ಬೆಂಬಲಕ್ಕೆ ಸೂಚನೆ

ಬೆಂಗಳೂರು : ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಅಪಘಾತದಲ್ಲಿ ಸಾವನ್ನಪ್ಪಿರುವವರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಮೋದಿ ಹೇಳಿದ್ದಾರೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣನ್ ಅವರ ಜೊತೆಗೆ ಘಟನೆ ಹಾಗೂ ಪರಿಸ್ಥಿತಿ ಬಗ್ಗೆ ಮಾತನಾಡಿದ್ದೇನೆ. ಪರಿಹಾರ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಸಂತ್ರಸ್ತರಿಗೆ ಎಲ್ಲ ರೀತಿಯ ಬೆಂಬಲ ನೀಡಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಇದನ್ನೂ ಓದಿ : ಮೈಸೂರಿನಲ್ಲಿ ಭೀಕರ ಅಪಘಾತ, 10 ಮಂದಿ ದುರ್ಮರಣ

ರಾಷ್ಟ್ರಪತಿ ಮುರ್ಮು ಸಂತಾಪ

ರೈಲು ಅಪಘಾತದ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಉಪರಾಷ್ಟ್ರಪತಿ ಜಗದೀಪ್ ಧನಕರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಕೂಡ ಅಪಘಾತದ ಬಗ್ಗೆ ವಿಷಾಧ ವ್ಯಕ್ತಪಡಿಸಿದ್ದಾರೆ. ರೈಲು ಅಪಘಾತವು ತುಂಬಾ ನೋವು ತಂದಿದೆ. ಎನ್ ಡಿಆರ್ ಎಫ್ ತಂಡ ಈಗಾಗಲೇ ಅಪಘಾತ ಸ್ಥಳಕ್ಕೆ ತಲುಪಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಅಮಿತ್ ಶಾ ಹೇಳಿದ್ದಾರೆ.

ಸಾವಿನ ಸಂಖ್ಯೆ 50ಕ್ಕೆ ಏರಿಕೆ

ರೈಲು ಅಪಘಾತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಇದೀಗ 50ಕ್ಕೆ ಏರಿಕೆಯಾಗಿದೆ. 179 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ದುರಂತದಲ್ಲಿ ಮೃತಪಟ್ಟವರ ಹಾಗೂ ಗಾಯಗೊಂಡವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಪರಿಹಾರ ಕಾರ್ಯಗಳು ಭರದಿಂದ ನಡೆಯುತ್ತಿದೆ.

ರಾಹುಲ್ ಗಾಂಧಿ ಸಂತಾಪ

ಇನ್ನೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. ಒಡಿಶಾದ ಬಾಲಸೋರ್ ಬಳಿ ನಡೆದಿರುವ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಅಪಘಾತದ ಸುದ್ದಿಯಿಂದ ದುಃಖಿತನಾಗಿದ್ದೇನೆ. ಮೃತರ ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ರಕ್ಷಣಾ ಕಾರ್ಯಗಳಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ನೀಡುವಂತೆ ನಾನು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES