ಬೆಂಗಳೂರು : ಹಿರಿಯ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷರಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ.
ಈ ಹಿಂದೆ ಬಿಡಿಎ ಆಯುಕ್ತರಾಗಿ ಸೇವೆ ಸಲ್ಲಿಸಿರುವ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡುವ ಮೂಲಕ ಶಾಸಕರ ಮಧ್ಯೆ ನಡೆದಿದ್ದ ಬಿಡಿಎ ಅಧ್ಯಕ್ಷ ಸ್ಥಾನದ ಲಾಬಿಗೆ ಸರ್ಕಾರ ತೆರೆ ಎಳೆದಿದೆ.
ಬಿಬಿಎಂಪಿ ಆಡಳಿತಾಧಿಕಾರಿಯಾಗಿರುವ ರಾಕೇಶ್ ಸಿಂಗ್ ಅವರನ್ನು ಸರ್ಕಾರ ಬಿಡಿಎ ಅಧ್ಯಕ್ಷರನ್ನಾಗಿ ನೇಮಿಸಿದೆ. ಆ ಮೂಲಕ ಬಿಡಿಎಗೆ ಶಾಸಕರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಸಂಪ್ರದಾಯಕ್ಕೆ ಸರ್ಕಾರ ಅಂತ್ಯವಾಡಿದೆ.
ಬಿಡಿಎ ಆಯುಕ್ತರಾಗಿ ಸೇವೆ
ಸದ್ಯ ರಾಕೇಶ್ ಸಿಂಗ್ ಅವರು ಬಿಬಿಎಂಪಿ ಆಡಳಿತಾಧಿಕಾರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಬಿಡಿಎ ಆಯುಕ್ತರಾಗಿ ಇವರು ಸೇವೆ ಸಲ್ಲಿಸಿದ ಅನುಭವವನ್ನು ಹೊಂದಿದ್ದಾರೆ. ಈಗ ಅವರನ್ನೇ ಅಧ್ಯಕ್ಷರನ್ನಾಗಿ ನೇಮಿಸಿರುವುದರಿಂದ ಅಭಿವೃದ್ಧಿ ಕಾರ್ಯಗಳು ಇನ್ನಷ್ಟು ವೇಗ ಪಡೆದುಕೊಳ್ಳುವ ಸಾಧ್ಯತೆಯಿದೆ.
ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ಶಾಸಕರಲ್ಲಿ ಭಾರೀ ಪೈಪೋಟಿ ಏರ್ಪಟ್ಟಿತ್ತು. ಮೂಲಗಳ ಪ್ರಕಾರ ಶಾಸಕರಾದ ಎನ್.ಎ ಹ್ಯಾರೀಸ್, ಎಂ ಕೃಷ್ಣಪ್ಪ, ಪ್ರಿಯಾಕೃಷ್ಣ ಹಾಗೂ ಟಿ.ಬಿ ಜಯಚಂದ್ರರ ಹೆಸರೂ ಇತ್ತು ಎನ್ನಲಾಗಿದೆ. ಬಿಡಿಎ ಅಧ್ಯಕ್ಷ ಸ್ಥಾನಕ್ಕಾಗಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಳಿ ಬೇಡಿಕೆ ಇಟ್ಟಿದ್ದರು. ಆದ್ರೆ, ಸರ್ಕಾರ ಇದಕ್ಕೆ ಸೊಪ್ಪು ಹಾಕಿಲ್ಲ.