Wednesday, January 22, 2025

ನಾನು ರಾಜ್ಯದ ಉದ್ದಗಲಕ್ಕೂ ಸಂಚಾರ ಮಾಡುತ್ತೇನೆ : ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು : ಮತ್ತೆ ನಾನು ರಾಜ್ಯದ ಉದ್ದಗಲಕ್ಕೂ ಸಂಚಾರ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿರುವ ಅವರು, ಪಕ್ಷವನ್ನು ಮತ್ತೆ ಕಟ್ಟುತ್ತೇವೆ. ಎದೆಗುಂದುವ ಪೈಕಿ ನಾವಲ್ಲ. ಬದ್ಧತೆ, ಪಕ್ಷ ಕಟ್ಟುವ ಛಲ, ಪ್ರಾಮಾಣಿಕ ಕಾರ್ಯಕರ್ತರಿಗೆ ಅವಕಾಶ ಕೊಡಲಾಗುವುದು ಎಂದು ತಿಳಿಸಿದ್ದಾರೆ.

ನಾನು ರಾಜ್ಯದ ಉದ್ದಗಲಕ್ಕೂ ಸಂಚಾರ ಮಾಡುತ್ತೇನೆ. ಜಿಲ್ಲೆಗಳಲ್ಲಿ ಸಭೆ ಮಾಡಿ ಜಿಲ್ಲಾ ಘಟಕಗಳಿಗೆ ಸರಿಯಾದ ಚಿಕಿತ್ಸೆ ಕೊಡಲಾಗುವುದು. ಪಕ್ಷ ಸಂಘಟನೆ ಮಾಡದಿರುವ ಜಿಲ್ಲಾ ಘಟಕಗಳ ಅಧ್ಯಕ್ಷರನ್ನು ಬದಲಾವಣೆ ಮಾಡುತ್ತೇವೆ. ಚುನಾವಣೆಗೆ ಸಮರ್ಥ ಅಭ್ಯರ್ಥಿಗಳನ್ನು ತಯಾರು ಮಾಡಲಾಗದವರನ್ನು ಬದಲಾವಣೆ ಮಾಡಲಾಗುವುದು ಎಂದು ಖಡಕ್ ಸೂಚನೆ ಕೊಟ್ಟಿದ್ದಾರೆ.

ಯುವಜನರಿಗೆ ಆದ್ಯತೆ ನೀಡುತ್ತೇವೆ

ಮುಂಬರುವ ಲೋಕಸಭಾ ಚುನಾವಣೆ ಹಾಗೂ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸಲಾಗುವುದು. ಪಕ್ಷ ಸಂಘಟನೆ ವಿಷಯದಲ್ಲಿ ಕೆಲ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಪಕ್ಷದ ಪದಾಧಿಕಾರಿಗಳನ್ನು ಮುಲಾಜಿಲ್ಲದೆ ಬದಲಾವಣೆ ಮಾಡುತ್ತೇವೆ. ಯುವಜನರಿಗೆ ಆದ್ಯತೆ ನೀಡುತ್ತೇವೆ. ಪಕ್ಷ ಕಟ್ಟುವ ಎಲ್ಲಾ ಉತ್ಸಾಹಿಗಳಿಗೆ ಅವಕಾಶ ಕೊಡುತ್ತೇವೆ. ಬದ್ಧತೆಯಿಂದ ಕೆಲಸ ಮಾಡುವವರಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿ ಸೋತಿದೆ : ಸಿ.ಟಿ ರವಿ

ಎಷ್ಟು ದಿನ ಇಂಥವರನ್ನು ಸಹಿಸಿಕೊಳ್ಳುವುದು

ಪಕ್ಷ ಸಂಘಟನೆ ಬಗ್ಗೆ ನಿರ್ಲಕ್ಷ್ಯ ಸಲ್ಲದು. ಅಂಥವರಿಗೆ ಅವಕಾಶ ಇಲ್ಲ. ಎಷ್ಟು ದಿನ ಇಂಥವರನ್ನು ಸಹಿಸಿಕೊಳ್ಳುವುದು. ಬದಲಾವಣೆಗೆ ಇದು ಸೂಕ್ತ ಸಮಯ. ಹಿರಿಯರು ಕೂಡ ಕಿರಿಯರಿಗೆ ಅವಕಾಶ ಮಾಡಿಕೊಡಬೇಕು ಎಂದು ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆಗಳ ಜಿಲ್ಲಾ ಮುಖಂಡರು ಭಾಗವಹಿಸಿದ್ದರು. ಮಾಜಿ ಸಚಿವ ಬಂಡೆಪ್ಪ ಕಾಷೆಂಪೂರ್, ಶಾಸಕರಾದ ನೇಮಿರಾಜ್ ನಾಯಕ್, ರಾಜುಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES