ಬೆಂಗಳೂರು : ಸ್ವಪಕ್ಷದ ವಿರುದ್ಧವೇ ಮಾತಾಡಿದವರ ವಿರುದ್ಧ ರಾಜ್ಯ ಬಿಜೆಪಿ ಶಿಸ್ತು ಕ್ರಮಕ್ಕೆ ಮುಂದಾಗಿದೆ.
ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿದ ಹಿನ್ನೆಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಸೇರಿ ಕೆಲವರಿಗೆ ಪಕ್ಷದ ರಾಜ್ಯ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ.
ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ಬಹಿರಂಗ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದಾರೆ. ಅಲ್ಲದೆ, ನಾಳೆ ಬರುವಂತೆಯೂ ಬಿಜೆಪಿ ನಾಯಕರಿಗೆ ತಾಕೀತು ಮಾಡಿದ್ದಾರೆ.
ಇದನ್ನೂ ಓದಿ : ಸ್ವಪಕ್ಷೀಯರ ವಿರುದ್ಧವೇ ಬೆಂಕಿಯುಗುಳಿದ ರೇಣುಕಾಚಾರ್ಯ
ಕಟೀಲ್, ಬೊಮ್ಮಾಯಿ ವಿರುದ್ಧ ವಾಗ್ದಾಳಿ
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ದ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ಮಾಡಿದ್ದರು. ಇತ್ತ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಹೊಂದಾಣಿಕೆ ಆರೋಪ ಮಾಡಿದ್ದರು.
ಇದೀಗ ಇಬ್ಬರಿಗೂ ಶಿಸ್ತು ಕ್ರಮದ ನೋಟಿಸ್ ಜಾರಿ ಮಾಡಿದೆ. ಕಾರಣ ಕೇಳಿ ಯಾಕೆ ಕ್ರಮ ಕೈಗೊಳ್ಳಬಾರದು ಎಂದು ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ನೋಟಿಸ್ ತಲುಪಿದ ಒಂದು ವಾರದೊಳಗೆ ಉತ್ತರ ನೀಡುವಂತೆ ಸೂಚನೆ ನೀಡಿದೆ.