ಬೆಂಗಳೂರು : ಹಾಲಿನ ಬೆಲೆಯನ್ನು ಹೆಚ್ಚಿಸುವ ಮೂಲಕ ಜನರ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಸಿದುಕೊಳ್ಳುವ ಕೆಲಸವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಮಾಡುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿನ 108 ಆ್ಯಂಬುಲೆನ್ಸ್ ಗಳ ಕಿರಿಕ್ ಗೆ ಬ್ರೇಕ್ : ತಜ್ಞರು ಸಮಿತಿ ರಚನೆಗೆ ಮುಂದಾದ…
ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಮದ್ಯದ ಬೆಲೆ ಏರಿಸಿದ ನಂತರ ಇದೀಗ ಹಾಲಿನ ಬೆಲೆಯನ್ನೂ ಲೀಟರಿಗೆ 3 ರೂ. ಹೆಚ್ಚಿಸಿ ಶ್ರಮಜೀವಿಗಳ ಜೇಬಿಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ. ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಇದೀಗ ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ವಿರೋಧ ಪಕ್ಷಗಳ ವಿರುದ್ದ ಕಿಡಿಕಾರುತ್ತಲೇ ಇತ್ತು, ಆದರೇ, ಅಧಿಕಾರಕ್ಕೆ ಬಂದ ಕೂಡಲೇ ಬೆಲೆ ಏರಿಕೆಯ ಶಾಕ್ ನೀಡುತ್ತಿದೆ. ಹೀಗಿದೆ ನೋಡಿ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತನೀತಿಗೆ ಧಿಕ್ಕಾರ ಎಂದು ಎಚ್‌ಡಿ ಕುಮಾರಸ್ವಾಮಿ ತಮ್ಮ ಸರಣಿ ಟ್ವೀಟ್ ಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.