Friday, November 22, 2024

ಧ್ವನಿ ಇಲ್ಲದವರಿಗೆ ಧ್ವನಿ ಕೊಡುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಹಾತ್ಮಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ, ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಅಕ್ರಮ ಸಂಬಂಧ: ಜೆಡಿಎಸ್ ಮುಖಂಡನಿಗೆ ಸ್ಥಳೀಯರಿಂದ ಹಿಗ್ಗಾಮುಗ್ಗಾ ಥಳಿತ!

ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಇವತ್ತಿನ ಬಹಳಷ್ಟು ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವುದು ನನ್ನ ಭಾವನೆ. ಪತ್ರಿಕಾ ವೃತ್ತಿಯ ಆಶಯಕ್ಕೆ ತಕ್ಕಂತೆ ಇದ್ದೇವಾ, ಇಲ್ಲವಾ ಎನ್ನುವ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಇದೆ ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಅನುಷ್ಠಾನಗೊಳ್ಳುವ ಹಿಂದಿನ ದಿನ ತಾವು ಮಾಡಿದ ಐತಿಹಾಸಿಕ ಭಾಷಣದಲ್ಲಿ, “ಆರ್ಥಿಕ-ಸಾಮಾಜಿಕ ಸ್ವಾತಂತ್ರ್ಯ ಸಿಗದೆ ಕೇವಲ ದೇಶಕ್ಕೆ ಆಡಳಿತಾತ್ಮಕ, ರಾಜಕೀಯ ಸ್ವಾತಂತ್ರ್ಯ ಸಿಕ್ಕರೆ ಅಸಮಾನತೆಗೆ ಬಲಿಯಾದ ಜನ ಮುಂದೊಂದು ದಿನ ಈ ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡಿಬಿಡಬಹುದು” ಎಂದಿದ್ದರು.

ಜನರ  ಜೇಬಿನಲ್ಲಿ ಹಣ ಇದ್ದರೆ ಮಾತ್ರ ದೇಶದ ಆರ್ಥಿಕತೆ ಬೆಳವಣಿಗೆ ಕಾಣುತ್ತದೆ. ಈ ಕಾರಣಕ್ಕೇ ನಮ್ಮ ಸರ್ಕಾರ ದುಡಿಯುವ ಜನರ ಜೇಬಿನಲ್ಲಿ ಹಣ ಇರುವ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಇದನ್ನು ವಿರೋಧಿಸುವ ಬಿಜೆಪಿಯವರ ಮನಸ್ಥಿತಿ ಸಮಾಜ ವಿರೋಧಿಯಾದದ್ದು. ಹೀಗಾಗಿ ಪತ್ರಿಕಾ ವೃತ್ತಿಯಲ್ಲಿರುವವರು ಬಡವರ ಪರವಾದ, ಜನರ ಪರವಾದ ಯೋಜನೆಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದರು.

ಹಿರಿಯ ಪತ್ರಕರ್ತೆ  ಡಾ.ಆರ್.ಪೂರ್ಣಿಮಾ ಅವರು ಪತ್ರಕರ್ತರ ಸಾಮಾಜಿಕ ಜವಾಬ್ದಾರಿ ಕುರಿತು ಉಪನ್ಯಾಸ ನೀಡಿದರು. ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್,  ಹಿರಿಯ ಪತ್ರಕರ್ತರು ಹಾಗೂ ಈ-ದಿನ‌ ಸುದ್ದಿ ಸಂಸ್ಥೆಯ ಮುಖ್ಯಸ್ಥರಾದ ಡಿ.ಉಮಾಪತಿ, ಸುವರ್ಣ ನ್ಯೂಸ್ ಪ್ರಧಾನ ಸಂಪಾದಕರಾದ ರವಿ ಹೆಗಡೆ, ವಾರ್ತಾ ಇಲಾಖೆ ಆಯುಕ್ತರಾದ ಡಾ.ಹೇಮಂತ್ ಎಂ ನಿಂಬಾಳ್ಕರ್ ಉಪಸ್ಥಿತರಿದ್ದರು.

15 ಕ್ಕೂ ಹೆಚ್ಚು ಮಂದಿ ಹಿರಿಯ ಪತ್ರಕರ್ತರು ಮತ್ತು ಛಾಯಾಗ್ರಾಹಕರುಗಳನ್ನು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸನ್ಮಾನಿಸಿದರು.

RELATED ARTICLES

Related Articles

TRENDING ARTICLES