Monday, May 6, 2024

ಸಿ.ಟಿ ರವಿಗೆ  ರಾಜ್ಯಾಧ್ಯಕ್ಷ ಸ್ಥಾನ ಸಾಧ್ಯತೆ:ನಿಜವಾಯ್ತಾ ಮಾಜಿ ಪ್ರಧಾನಿ ಹೇಳಿಕೆ?

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಮಂಡಳಿಯಿಂದ ಮಾಜಿ ಶಾಸಕ ಸಿಟಿ ರವಿಯವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆಗೊಳಿಸಿದೆ. ಇದರೊಂದಿಗೆ ಅವರೇ ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಬಿಜೆಪಿ ಪಾರ್ಟಿ ಆಡಳಿತಾತ್ಮಕ ಬದಲಾವಣೆ: ಸಿ.ಟಿ ರವಿಗೆ ಕೋಕ್!

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಈ ನಿರ್ಧಾರ ಹೊರಬಿದ್ದಿದ್ದು, ಸಿಟಿ ರವಿಗೆ ಕರ್ನಾಟಕ ಬಿಜೆಪಿ ಅಧ್ಯಕ್ಷ ಸ್ಥಾನ ಒಲಿಯುವ ಸಾಧ್ಯತೆ ಇದೆ. ಒಬ್ಬರು ಎರಡು ಹುದ್ದೆಯಲ್ಲಿ ಇರಬಾರದು ಎಂಬ ಕಾರಣಕ್ಕೆ ರಾಷ್ಟ್ರೀಯ ಮಂಡಳಿಯಿಂದ ಕೊಕ್‌ ನೀಡಿ ರಾಜ್ಯ ರಾಜಕಾರಣಕ್ಕೆ ಕಳುಹಿಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸದ್ಯ ಇರುವ ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಅಧಿಕಾರಾವಧಿ ಕಳೆದ ವರ್ಷ ಆಗಸ್ಟ್‌ನಲ್ಲಿಯೇ ಮುಕ್ತಾಯವಾಗಿದ್ದು, ವಿಧಾನಸಭೆ ಚುನಾವಣೆ ಹಿನ್ನೆಲೆ ಅವರನ್ನೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲಾಗಿತ್ತು. ಹೀನಾಯ ಸೋಲಿನ ಬೆನ್ನಲ್ಲಿಯೇ ಅಧ್ಯಕ್ಷ ಸ್ಥಾನದ ಬದಲಾವಣೆಗೆ ಕೂಗು ಕೇಳಿಬಂದಿತ್ತು. ಫಲಿತಾಂಶ ಬಂದು 75 ದಿನಗಳಾದರೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸ ವ್ಯಕ್ತಿ ಬಂದಿಲ್ಲ. ಈ ಹಿನ್ನೆಲೆ ಸಿಟಿ ರವಿ ಅವರು ಮುಂದಿನ ರಾಜ್ಯಾಧ್ಯಕ್ಷರಾಗುವ ಸಾಧ್ಯತೆ ಇದೆ.

ಕಳೆದ ಚುನಾವಣೆಗಳಿಗೆ ಹೋಲಿಕೆ ಮಾಡಿದರೆ ಈ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯದ ಪ್ರಾಬಲ್ಯ ಇರುವ ಹಳೇ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಸಾಮರ್ಥ್ಯ ವೃದ್ಧಿಯಾಗಿದೆ. ಆದ್ದರಿಂದ ಈ ಭಾಗದಲ್ಲಿ ಹೆಚ್ಚಿನ ಒಕ್ಕಲಿಗ ಮತಗಳ ಕ್ರೋಢಿಕರಣಕ್ಕೆ ಒಕ್ಕಲಿಗ ಸಮುದಾಯದ ಸಿಟಿ ರವಿ ಅವರನ್ನೇ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡುವ ನಿರೀಕ್ಷೆ ಇದೆ. ಈಗಾಗಲೇ ಉನ್ನತ ಮಟ್ಟದಲ್ಲಿ ಈ ಬಗ್ಗೆ ಚರ್ಚೆಯಾಗಿರುವುದರಿಂದಲೇ ಬಿಜೆಪಿ ರಾಷ್ಟ್ರೀಯ ಮಂಡಳಿಯಿಂದ ಅವರನ್ನು ಕೈಬಿಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಎಚ್ಡಿ ದೇವೇಗೌಡ ಹೇಳಿದ್ದೇನು ? : ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌ಡಿ ದೇವೇಗೌಡ ಕೂಡ ಬಿಜೆಪಿ ಬೆಳವಣಿಗೆಗಳ ಬಗ್ಗೆ ಮಾತನಾಡಿದ್ದರು. ಈ ವೇಳೆ ಸಿಟಿ ರವಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲು ಬಿಜೆಪಿಯಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಿದ್ದರು. ಇದೀಗ ಎಚ್‌ಡಿಡಿ ಹೇಳಿಕೆ ಬಿಜೆಪಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

RELATED ARTICLES

Related Articles

TRENDING ARTICLES