ಬೆಂಗಳೂರು : ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಂತ್ರಸ್ತೆಯರು ಇದೀಗ ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಬೇಕು ಎಂದು ಇಬ್ಬರು ಮಹಿಳೆಯರು ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಕಾನೂನಿನ ಪ್ರಕಾರ ತಮ್ಮ ಗುರುತನ್ನು ಗೌಪ್ಯವಾಗಿಡಬೇಕೆಂದು ವಿನಂತಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಅರ್ಜಿಯ ವಿಚಾರಣೆ ನಡೆಸಲಿದೆ. ಕಲಹ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿದ ಪ್ರಕರಣವನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸುವಂತೆ ಕೇಂದ್ರ ಸರ್ಕಾರ ಮಾಡಿರುವ ಮನವಿಯನ್ನು ಕೂಡ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.