ಬೆಂಗಳೂರು : ಚಂದ್ರಯಾನ 3 ಯಶಸ್ಸಿನ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಇಸ್ರೋ ಕಚೇರಿಗೆ ಭೇಟಿ ನೀಡಿ, ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.
ಆಗಸ್ಟ್ 26ರಂದು ಸಂಜೆ 5.55ಕ್ಕೆ ಬೆಂಗಳೂರಿಗೆ ಹೆಚ್‌ಎಎಲ್ ಏರ್‌ಪೋರ್ಟ್‌ಗೆ ಆಗಮಿಸಲಿರುವ ಮೋದಿ, 6.30ರವರೆಗೆ ಏರ್‌ಪೋರ್ಟ್‌ನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.
ಬಳಿಕ ಸಂಜೆ 7ಗಂಟೆಗೆ ಇಸ್ರೋ ಕಚೇರಿಗೆ ಭೇಟಿ ನೀಡಿ, ವಿಜ್ಞಾನಿಗಳು ಹಾಗೂ ಸಿಬ್ಬಂದಿಗಳನ್ನು ಅಭಿನಂದಿಸಲಿದ್ದಾರೆ. 8.30ಕ್ಕೆ ಪುನಃ ದೆಹಲಿಗೆ ವಾಪಸ್ ಆಗಲಿದ್ದಾರೆ.
ಇಸ್ರೋ ಅಧ್ಯಕ್ಷರಿಗೆ ಮೋದಿ ಕರೆ
ಚಂದ್ರಯಾನ-3 ಯಶಸ್ವಿಯಾಗಿ ಚಂದಮಾಮನ ಅಂಗಳದಲ್ಲಿ ಪಾದಾರ್ಪಣೆ ಮಾಡುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಸಂತಸ ಹಂಚಿಕೊಂಡರು. ಭಾರತ ಖಗೋಳ ವಿಜ್ಞಾನದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ ಎಂದು ಮೋದಿ ನಮ್ಮ ಇಸ್ರೋ ವಿಜ್ಞಾನಿಗಳನ್ನು ಪ್ರಶಂಸಿಸಿದರು. ಇಸ್ರೋ ಅಧ್ಯಕ್ಷ ಸೋಮನಾಥ್‌ಗೆ ಕರೆ ಮಾಡಿ ಅಭಿನಂದನೆಗಳನ್ನು ಸಲ್ಲಿಸಿದರು.
ಬೊಮ್ಮಾಯಿ ಅಭಿನಂದನೆ
ಚಂದ್ರಯಾನ-3 ಯಶಸ್ಸಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ. ಭಾರತವಿಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಹೆಜ್ಜೆಯಿರಿಸಿದ ಜಗತ್ತಿನ ಮೊದಲ ರಾಷ್ಟ್ರವಾಗಿ ಗುರುತಿಸಿಕೊಂಡಿದೆ. ಚಂದ್ರಯಾನ 3 ರ ಯಶಸ್ವಿಗಾಗಿ ಶ್ರಮಿಸಿದ ವಿಜ್ಞಾನಿಗಳಿಗೆ ಮತ್ತು ಇಸ್ರೋ ಸಂಸ್ಥೆಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.