ಮೈಸೂರು : ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಹಿಳೆಯರು ಈ ಹಣವನ್ನು ವಿವಿಧ ಉದ್ದೇಶಗಳಿಗೆ ಬಳಕೆ ಮಾಡುವುದರಿಂದ ಸರ್ಕಾರಕ್ಕೂ ಆದಾಯ ಬರಲಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆ ನಾಳಿದ್ದು ಅನುಷ್ಠಾನಗೊಳ್ಳಲಿದೆ. ರಾಜ್ಯದಾದ್ಯಂತ 1.30 ಕೋಟಿ ಕುಟುಂಬದ ಯಜಮಾನಿಯರು ಇದರ ಫಲಾನುಭವಿಗಳು. ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಗಳನ್ನು ಒಳಗೊಂಡಂತೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ನಾಲ್ಕು ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮವನ್ನು ಬೆಳಗಾವಿಯಿಂದ ಮೈಸೂರಿಗೆ ಸ್ಥಳಾಂತರ ಮಾಡಿರುವುದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.