ಬೆಂಗಳೂರು : ಕೋರಮಂಗಲದ ಕೇಂದ್ರೀಯ ಸದನ ಮತ್ತು ಈಜಿಪುರ ನಡುವೆ ಸಂಪರ್ಕ ಕಲ್ಪಿಸುವ ಈಜೀಪುರ ಮೇಲುಸೇತುವೆ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಈಜಿಪುರ-ಕೇಂದ್ರೀಯ ಸದನ ಮೇಲ್ಸೇತುವೆ ಯೋಜನೆಗೆ ಇಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಹೇಳಿದ್ದಾರೆ.
ಈಜಿಪುರದಿಂದ ಕೇಂದ್ರೀಯ ಸದನ ಮೇಲ್ಸೇತುವೆ 2.40 ಕಿಮೀ ಉದ್ದವಿದೆ. ದಕ್ಷಿಣ ಮತ್ತು ಪೂರ್ವ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಕಾರಿಡಾರ್ ಇದಾಗಿದೆ. ಹಿಂದೆ 2017ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ಈ ಯೋಜನೆ ಪ್ರಾರಂಭವಾಗಿ ಉತ್ತಮ ರೀತಿಯಲ್ಲಿ ಕಾಮಗಾರಿ ನಡೆದಿತ್ತು. ತದನಂತರ ಬಿಜೆಪಿ ಸರ್ಕಾರವು ಯೋಜನೆಗೆ ಯಾವುದೇ ಪ್ರಾಮುಖ್ಯತೆಯನ್ನು ನೀಡದ ಕಾರಣ ಕಾಮಗಾರಿ ಸಂಪೂರ್ಣ ನೆನೆಗುದಿಗೆ ಬಿದ್ದಿತ್ತು ಎಂದಿದ್ದಾರೆ.
ಈಗ ಮತ್ತೆ 2023ರಲ್ಲಿ ಸಿದ್ದರಾಮಯ್ಯನವರೇ ಮತ್ತೆ ಮುಖ್ಯಮಂತ್ರಿಯಾಗಿ ಮತ್ತು ಡಿ.ಕೆ ಶಿವಕುಮಾರ್ ಅವರು ಡಿಸಿಎಂ ಆಗಿ ಈ ಮೇಲ್ಸೇತುವೆ ಯೋಜನೆಯ ಅನುಷ್ಠಾನಕ್ಕೆ ಕಾರಣರಾಗಿದ್ದಾರೆ. ಈ ಯೋಜನೆ ಪೂರ್ಣಗೊಂಡ ನಂತರ ವಾಹನ ಸಂಚಾರ ಇನ್ನಷ್ಟು ಸುಗಮವಾಗಲಿದೆ ಎಂದು ತಿಳಿಸಿದ್ದಾರೆ.